ಮಾರಸಿಂಗನಹಳ್ಳಿ ಮಾದರಿ ಗ್ರಾಮವಾಗಿ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

| Published : Jul 03 2024, 12:16 AM IST

ಮಾರಸಿಂಗನಹಳ್ಳಿ ಮಾದರಿ ಗ್ರಾಮವಾಗಿ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್
Share this Article
  • FB
  • TW
  • Linkdin
  • Email

ಸಾರಾಂಶ

ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಗ್ರಾಮದ ಅಭಿವೃದ್ಧಿಗೆ ಯಾವುದೇ ಚಿಂತನೆ ನಡೆಸಿಲ್ಲ. ಇದರಿಂದ ಗ್ರಾಮ ಹಿಂದುಳಿದ ಗ್ರಾಮವಾಗಿದೆ. ದಿನೇಶ್ ಗೂಳಿಗೌಡ ಅಥವಾ ನಾನು ಯಾವುದೇ ರಾಜಕೀಯ ಕುಟುಂಬದಿಂದ ಬಂದಿಲ್ಲ. ಸಾಮಾನ್ಯರಾಗಿ ನಮ್ಮಗಳ ವೃತ್ತಿಯಲ್ಲಿ ತೊಡಗಿಕೊಂಡಿದ್ದೆವು. ಅಚಾನಕ್ಕಾಗಿ ರಾಜಕೀಯ ಬಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದೇವೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಮಾರಸಿಂಗನಹಳ್ಳಿಯನ್ನು ಮಾದರಿ ಗ್ರಾಮವಾಗಿ ಅಭಿವೃದ್ಧಿ ಪಡಿಸುವುದಾಗಿ ಶಾಸಕ ಕೆ.ಎಂ.ಉದಯ್ ಹೇಳಿದರು.

ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ ಸುಮಾರು 4. 85 ಲಕ್ಷ ರು. ವೆಚ್ಚದಲ್ಲಿ ಕೈಗೊಂಡಿರುವ ಶಿಂಷಾ ಎಡದಂಡೆ ಮತ್ತು ಬಲದಂಡೆ ನಾಲಾವ್ಯಾಪ್ತಿಯ ಕೆರೆ ಹಾಗೂ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಈ ಊರಿನ ಮಗನಾದರೆ, ನಾನು ಮೊಮ್ಮಗ. ನಾವಿಬ್ಬರೂ ಸೇರಿ ಒಗ್ಗಟ್ಟಿನಿಂದ ಹೋರಾಟ ನಡೆಸಿದ ಫಲವಾಗಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.

ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಗ್ರಾಮದ ಅಭಿವೃದ್ಧಿಗೆ ಯಾವುದೇ ಚಿಂತನೆ ನಡೆಸಿಲ್ಲ. ಇದರಿಂದ ಗ್ರಾಮ ಹಿಂದುಳಿದ ಗ್ರಾಮವಾಗಿದೆ. ದಿನೇಶ್ ಗೂಳಿಗೌಡ ಅಥವಾ ನಾನು ಯಾವುದೇ ರಾಜಕೀಯ ಕುಟುಂಬದಿಂದ ಬಂದಿಲ್ಲ. ಸಾಮಾನ್ಯರಾಗಿ ನಮ್ಮಗಳ ವೃತ್ತಿಯಲ್ಲಿ ತೊಡಗಿಕೊಂಡಿದ್ದೆವು. ಅಚಾನಕ್ಕಾಗಿ ರಾಜಕೀಯ ಬಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದೇವೆ ಎಂದರು.

ಜನರ ಋಣ ತೀರಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಮುಂದಿನ ದಿನಗಳಲ್ಲಿ ನಾವಿಬ್ಬರೂ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ನನ್ನ ಹುಟ್ಟೂರು ಮಾರಸಿಂಗನಹಳ್ಳಿ ರಸ್ತೆ ಮತ್ತು ಕೆರೆ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಉದಯ್ ಅವರೊಂದಿಗೆ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬೇಡಿಕೆ ಸಲ್ಲಿಸಿದ ಪರಿಣಾಮ ಅವರು ಕಾಮಗಾರಿಗೆ 4. 85 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದಾರೆ. ಕಾಮಗಾರಿ ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಕೆಆರ್‌ಎಸ್ ಜಲಾಶಯದಿಂದ ವಿ.ಸಿ.ನಾಲೆ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಸಮರ್ಪಕವಾಗಿ ಹರಿಯಲು ಅನುಕೂಲವಾಗುವಂತೆ ನಾಲೆಗಳ ದುರಸ್ತಿ ಕಾರ್ಯ ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಉಪಮುಖ್ಯಮಂತ್ರಿ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ ಎಂದರು.

ಈ ವೇಳೆ ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಗ್ರಾಪಂ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಗೂಳೇಶ್, ಸದಸ್ಯರಾದ ನಾಗರಾಜು, ವರಲಕ್ಷ್ಮಿ, ಎಂಪಿಸಿಎಸ್ ಅಧ್ಯಕ್ಷ ಪುಟ್ಟಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ, ಮುಖಂಡರಾದ ರಾಮಚಂದ್ರ. ಪುಟ್ಟಸ್ವಾಮಿ, ರಾಮಣ್ಣ ಭಾಗವಹಿಸಿದ್ದರು.ಡಿಕೆಶಿಗೆ ಸಿಎಂ ಆಗುವ ಅರ್ಹತೆ, ಯೋಗ್ಯತೆ ಇದೆ: ಎಂ.ಉದಯ್

ಮದ್ದೂರು: ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ, ಯೋಗ್ಯತೆ ಇದ್ದು, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗುತ್ತದೆ ಎಂದು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ದೃಢವಾಗಿ ಹೇಳಿದರು.

ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಕೆಲವು ಶಾಸಕರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ ಹೊರತು ಯಾರೋ ಶಾಸಕರು ಚಟಕ್ಕೆ ಮಾತನಾಡಿದರೆ ಅದಕ್ಕೆ ಬೆಲೆ ಕೊಡುವ ಅಗತ್ಯವಿಲ್ಲ. ಸಿಎಂ, ಡಿಸಿಎಂ ಬದಲಾವಣೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಚರ್ಚೆಯಾಗಬೇಕೇ ಹೊರತು ಶಾಸಕರ ಇತಿಮಿತಿಯಲ್ಲಿ ಚರ್ಚೆಯಾಗುವ ವಿಷಯವಲ್ಲ. ಈ ವಿಚಾರದಲ್ಲಿ ನಾನು ಅಥವಾ ರಸ್ತೆಯಲ್ಲಿ ಓಡಾಡುವ ಜನರು ಆಡುವ ಆಟ ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ ಎಂದರು.

ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಇದರಲ್ಲಿ ನಾವು ಮೂಗು ತೂರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಇದ್ದರು.