ಮೋದಿ ಅಧಿಕಾರವಧಿಯಲ್ಲಿ ದೇಶದ ಅಭಿವೃದ್ಧಿ

| Published : May 05 2024, 02:02 AM IST

ಸಾರಾಂಶ

ನರೇಂದ್ರ ಮೋದಿ ಕಳೆದ 23 ವರ್ಷದಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಸಹ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ದೇಶದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ

ಮುಂಡರಗಿ: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ಸಿನವರು ಅನೇಕ ಭ್ರಷ್ಟಾಚಾರದ ಹಗರದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಅದರಲ್ಲಿ ಕೆಲವು ನಾಯಕರು ಜೈಲಿಗೆ ಹೋಗಿ ಬಂದಿದ್ದಾರೆ, ಇನ್ನು ಕೆಲವರು ಬೇಲ್ ಮೇಲೆ ಬಂದಿದ್ದಾರೆ. ಆದರೆ ನರೇಂದ್ರ ಮೋದಿ ಕಳೆದ 23 ವರ್ಷದಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಸಹ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ದೇಶದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಅವರು ಶುಕ್ರವಾರ ಸಂಜೆ ಮುಂಡರಗಿಯಲ್ಲಿ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶದಲ್ಲಿ ಈ ಹಿಂದೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಶ್ಮೀರದಿಂದ ಕನ್ಯಾಕುಮಾರಿಯವರಿಗೂ ಪ್ರತಿನಿತ್ಯ ಉಗ್ರರ ಹಾವಳಿಯಿಂದ ಗುಂಡಿನ ದಾಳಿ, ಬಾಂಬುಗಳ ದಾಳಿಗೆ, ಸೈನಿಕರು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಲಿಯಾಗುತ್ತಿದ್ದರು. ಕಳೆದ ಹತ್ತು ವರ್ಷಗಳಿಂದ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ನಂತರ ಪುಲ್ವಾಮಾ ದಾಳಿ ನಂತರ ಉಗ್ರರಿಗೆ ನಡುಕ ಹುಟ್ಟಿಸಿ ಪಾಕಿಸ್ತಾನಿಗಳಿಗೂ ಸಹ ಬುದ್ಧಿ ಕಲಿಸುವಂತಹ ಕಾರ್ಯ ಮಾಡಿದ್ದಾರೆ ಎಂದರು.

ಮತ್ತೊಮ್ಮೆ ದೇಶಕ್ಕೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಮೇ 7 ರಂದು ಎಲ್ಲರೂ ಬೆಳಗ್ಗೆ ಬಿಸಿಲು ಬೀಳುವ ಮೊದಲೇ ಮತಗಟ್ಟೆಗಳಿಗೆ ತೆರಳಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದ್ದಿ ಕಾಣಲು ಬಸವರಾಜ ಬೊಮ್ಮಾಯಿಯವರಿಗೆ ಮತ ಹಾಕುವ ಮೂಲಕ ಅವರನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು ಎಂದರು.

ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ಭಾರತೀಯರೆಲ್ಲರೂ ನಮ್ಮ ದೇಶದಲ್ಲಿ ಸುರಕ್ಷಿತವಾಗಿರಬೇಕಾದರೆ ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಅತ್ಯವಶ್ಯ. ಆದ್ದರಿಂದ ಎಲ್ಲರೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಪಟ್ಟಕ್ಕೇರಿಸೋಣ ಎಂದರು.

ಈ ಸಂದರ್ಭದಲ್ಲಿ ಸಂಸದ ಶಿವಕುಮಾರ ಉದಾಸಿ, ಶಿವಕುಮಾರಗೌಡ ಪಾಟೀಲ, ಕರಬಸಪ್ಪ ಹಂಚಿನಾಳ, ಲಿಂಗರಾಜಗೌಡ ಪಾಟೀಲ, ಹೇಮಗಿರೀಶ ಹಾವಿನಾಳ, ರವೀಂದ್ರ ಉಪ್ಪಿನಬೆಟಗೇರಿ, ಭೀಮಸಿಂಗ್ ರಾಠೋಡ, ಎಸ್.ವಿ.ಪಾಟೀಲ ಸೇರಿದಂತೆ ಅನೇಕರು ಇದ್ದರು.