ಸಾರಾಂಶ
ಕನ್ನಡಪ್ರಭ ವಾರ್ತೆ ಹೊಸಪೇಟೆ
ಪ್ರಜಾಪ್ರಭುತ್ವವು ಆಯಾ ದೇಶದ ಜನರಿಂದ ಶಕ್ತಿಯನ್ನು ಪಡೆಯುತ್ತದೆ. ಜನರ ಧ್ವನಿಗಳು, ಅವರ ಆಯ್ಕೆಗಳು ಮತ್ತು ಸಮಾಜಗಳನ್ನು ರೂಪಿಸುವಲ್ಲಿ ಅವರ ಭಾಗವಹಿಸುವಿಕೆ ಜೊತೆಗೆ ಹಕ್ಕುಗಳನ್ನು ರಕ್ಷಿಸಿದಾಗ ಮಾತ್ರ ಅದು ಅಭಿವೃದ್ಧಿ ಹೊಂದುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.
ಜಿಪಂ ಸಿಇಒ ಅಕ್ರಮ್ ಅಲಿ ಷಾ ಮಾತನಾಡಿದರು.ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವ ದಿನ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಸೈಕಲ್ ಜಾಥಾಕ್ಕೆ ಹಸಿರು ನಿಶಾನೆ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಸೈಕಲ್ ಜಾಥಾ ಆರಂಭಗೊಂಡು ಸಾಯಿಬಾಬಾ ಸರ್ಕಲ್, ಎಪಿಎಂಸಿ ಸರ್ಕಲ್, ವಾಲ್ಮೀಕಿ ಸರ್ಕಲ್, ಮದಕರಿ ನಾಯಕ ಸರ್ಕಲ್, ಏಕ್ ಮಿನಾರ್, ಮಸೀದಿ, ಗಾಂಧಿ ಚೌಕ್, ಪುಣ್ಯಮೂರ್ತಿ ಸರ್ಕಲ್, ಪುನೀತ್ ರಾಜಕುಮಾರ ಸರ್ಕಲ್, ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ಮೂಲಕ ಜಿಲ್ಲಾ ಒಳಂಗಾಣ ಕ್ರೀಡಾಂಗಣದವರೆಗೆ ಸೈಕಲ್ ರ‍್ಯಾಲಿ ಜಾಥಾವನ್ನು ನಡೆಸಲಾಯಿತು. ಸೈಕಲ್ ರ‍್ಯಾಲಿಯಲ್ಲಿ ಐದನೂರಕ್ಕು ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಈ ವೇಳೆ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಸಹಾಯಕ ಆಯುಕ್ತ ಪಿ.ವಿವೇಕಾನಂದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಡಿಡಿಪಿಯು ನಾಗರಾಜ ಹವಾಲ್ದಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪಿ.ಜಿ. ಚಿದಾನಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ. ಕಾಳೆ, ಹೊಸಪೇಟೆ ಬಿಇಒ ಶೇಖರಪ್ಪ ಹೊರಪೇಟೆ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.