ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರ್.ಬಸನಗೌಡ ತುರವಿಹಾಳ ಶನಿವಾರ ಭೂಮಿಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಮಸ್ಕಿ
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರ್.ಬಸನಗೌಡ ತುರವಿಹಾಳ ಶನಿವಾರ ಭೂಮಿಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಮಸ್ಕಿ ತಾಲೂಕಿನ ರಂಗಾಪೂರು ಗ್ರಾಮದಲ್ಲಿ ಸಿಸಿ ರಸ್ತೆ, ಗುಡದೂರು ಗ್ರಾಮದಲ್ಲಿ ಸಾಂಸ್ಕೃತಿಕ ಭವನ, ಬೆಳ್ಳಿಗಾನೂರು, ಬುದ್ದಿನ್ನಿ ಮತ್ತು ಜಾಲವಾಡಗಿ ಗ್ರಾಮದಲ್ಲಿ ಸಿಸಿ ರಸ್ತೆ ಸೇರಿ ಒಟ್ಟು 2.52 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ ಇತರೆ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಅಭಿವೃದ್ಧಿ ಎನ್ನುವುದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಬಾರದು. ಗ್ರಾಮೀಣ ಪ್ರದೇಶಗಳಿಗೂ ಸಮರ್ಪಕ ಮೂಲಸೌಕರ್ಯ ದೊರೆಯಬೇಕು. ಜನರ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ರೂಪಿಸಿ, ಗುಣಮಟ್ಟದೊಂದಿಗೆ ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಅವರು ತಿಳಿಸಿದರು.
ಕಾಮಗಾರಿಗಳ ಗುಣಮಟ್ಟಕ್ಕೆ ಒತ್ತು: ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕ ಸೂಚಿಸಿದರು. ಕಾಮಗಾರಿಗಳು ನಿಗದಿತ ಮಾನದಂಡದಂತೆ ನಡೆಯಬೇಕು ಹಾಗೂ ಸಾರ್ವಜನಿಕರಿಗೆ ದೀರ್ಘಕಾಲ ಉಪಯೋಗ ವಾಗುವ ರೀತಿಯಲ್ಲಿ ನಿರ್ಮಾಣವಾಗಬೇಕು ಎಂದು ಹೇಳಿದರು.ಕಾಮಗಾರಿಗಳ ಪ್ರಗತಿಯನ್ನು ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ, ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕಾಮಗಾರಿಗಳಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕೆಂದರು. ಕ್ಷೇತ್ರದಲ್ಲಿ ಇನ್ನೂ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹಂತ ಹಂತವಾಗಿ ಅನುಷ್ಠಾನಗೊಳಿಸುವ ಭರವಸೆಯನ್ನು ಶಾಸಕ ಆರ್.ಬಸನಗೌಡ ನೀಡಿದರು.ಈ ಸಂದರ್ಭದಲ್ಲಿ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮೈಬುಸಾಬ ಮುದ್ದಾಪೂರು, ಕಾಂಗ್ರೆಸ್ನಿ ಮುಖಂಡರಾದ ರುಪಾದೆಪ್ಪ ಗುಡಿಹಾಳ, ಅಜಯ ನಾಡಗೌಡ, ಹುಲುಗಪ್ಪ, ದುರುಗೇಶ ವಕೀಲರು, ಮಲ್ಲನಗೌಡ ಸುಂಕನೂರು, ರಮೇಶ ಕರೆಕುರಿ, ಆಲಂಭಾಷ ಗೋನಾಳ ಸೇರಿದಂತೆ ವಿವಿಧ ಮುಖಂಡರು ಮತ್ತು ಕಾರ್ಯಕರ್ತರಿದ್ದರು.