ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಿ.ದೇವರಾಜ ಅರಸು ವಿನೂತನ ಹಾಗೂ ವಿಶಿಷ್ಟ ವ್ಯಕ್ತಿತ್ವ ಹೊಂದಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿದರು. ಬಡವರ ಹಾಗೂ ದುರ್ಬಲರ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು ಎಂದು ಹೇಳಿದರು.ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯ ಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಶ್ರಮಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಕೆ.ಆರ್.ಭಾರತಿ ಮಾತನಾಡಿ, ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಹಿಂದುಳಿದ ವರ್ಗಗಳ ಹರಿಕಾರರಾಗಿ ರಾಜ್ಯದಲ್ಲಿ ಪರಿವರ್ತನೆಯತ್ತ ಹೆಜ್ಜೆ ಹಾಕಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು ಎಂದರು.ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ಡಿ.ದೇವರಾಜ ಅರಸು ಬದ್ಧತೆಯಾಗಿತ್ತು. ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೃಷಿಕರು, ಬಡವರು, ನಿರ್ಗತಿಕರು, ಇತರರು ಓಡಾಡುವಂತೆ ಮಾಡಿದರು. ಸಾಲ ಮನ್ನಾ ಯೋಜನೆ, ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ, ವೃದ್ಧಾಪ್ಯ ವೇತನ ಯೋಜನೆ ಜಾರಿ ಹೀಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದರು ಎಂದರು.
ಹಾವನೂರು ಆಯೋಗ ರಚಿಸುವ ಮೂಲಕ ಎಲ್ಲಾ ವರ್ಗಗಳಿಗೂ ಮೀಸಲಾತಿ ತಲುಪಿಸಲು ಪ್ರಯತ್ನಿಸಿದರು. ಸಹಕಾರ ಸಂಘಗಳ ಸ್ಥಾಪನೆ, ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಆರಂಭ, ಬೆಂಗಳೂರಿಗೆ ಕಾವೇರಿ ನೀರು ಒದಗಿಸಿದ್ದು, ಕನ್ನಡ ನಾಡು ನುಡಿ ಬಗ್ಗೆ ಅಪಾರ ಅಭಿಮಾನವನ್ನು ಡಿ.ದೇವರಾಜ ಅರಸು ಹೊಂದಿದ್ದರು ಎಂದು ಭಾರತಿ ವಿವರಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಡಿ.ದೇವರಾಜ ಅರಸು ಅವರು ಮೌನಕ್ರಾಂತಿಯ ಹರಿಕಾರ ಎಂದರೆ ತಪ್ಪಾಗಲಾರದು ಎಂದು ನುಡಿದರು.
ಸಣ್ಣ ಸಣ್ಣ ಸಮಾಜದ ಜನರನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದರು. ಅಪಾರ ದಾರ್ಶನಿಕ ಹಾಗೂ ಸಮಾಜ ಮುಖಿ ವ್ಯಕ್ತಿತ್ವ ಹೊಂದಿದ್ದ ಅರಸು ಅವರು ಅವಕಾಶ ವಂಚಿತರ ಕಣ್ಮಣಿ ಎಂದು ಬಣ್ಣಿಸಿದರು.ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಚಿತ್ರಕಲೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಉತ್ತಮ ನೌಕರರನ್ನು ಸನ್ಮಾನಿಸಲಾಯಿತು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ ಮಾತನಾಡಿದರು.ಪ್ರಮುಖರಾದ ಮೇದಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತ ವಿಜಯ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ ಮತ್ತಿತರರು ಇದ್ದರು.
ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್ ಸ್ವಾಗತಿಸಿ, ನಿರೂಪಿಸಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಾಶ್ ವಂದಿಸಿದರು.