ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ ಎಂದು ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಹೇಳಿದರು.
ರಾಣಿಬೆನ್ನೂರ: ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ ಎಂದು ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಹೇಳಿದರು.
ನಗರದ ನೆಹರು ಮಾರ್ಕೆಟ್ ವರ್ತಕರ ಸಂಘದ ಸಭಾಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಹಾಗೂ ಪಾನಮುಕ್ತರ ಅಭಿನಂದನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಮದ್ಯವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಒಳಗಾದವರನ್ನು ಪರಿವರ್ತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಯೋಜನೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರ ಆಶಯದಂತೆ ಸಮಾಜವನ್ನು ದುಶ್ಚಟಗಳಿಂದ ಮುಕ್ತಗೊಳಿಸಿ ಆರೋಗ್ಯಕರ ಹಾಗೂ ಸ್ವಾವಲಂಬಿ ಬದುಕಿನತ್ತ ಕೊಂಡೊಯ್ಯುವ ಕಾರ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ಮದ್ಯವರ್ಜನ ಶಿಬಿರಗಳ ಮೂಲಕ ಮದ್ಯವ್ಯಸನದಿಂದ ಹೊರಬರುವವರಿಗೆ ಹೊಸ ಬದುಕಿನ ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ಸಾವಿರಾರು ಕುಟುಂಬಗಳು ಸಂಕಷ್ಟದಿಂದ ಹೊರಬಂದು ನೆಮ್ಮದಿಯ ಜೀವನ ನಡೆಸುವಂತಾಗಿದೆ. ದುಶ್ಚಟದಿಂದ ಕುಟುಂಬದಲ್ಲಿ ಉಂಟಾಗುವ ಆರ್ಥಿಕ, ಸಾಮಾಜಿಕ ಹಾಗೂ ಕೌಟುಂಬಿಕ ಸಮಸ್ಯೆಗಳನ್ನು ನಿವಾರಿಸುವಲ್ಲಿ ಜನಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿವೆ ಎಂದು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಅಶೋಕ ಬಿ. ಮಾತನಾಡಿ, ಭಾರತವು ಹಳ್ಳಿಗಳ ದೇಶವಾಗಿದ್ದು, ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕಬೇಕು ಎಂಬುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಇದೇ ಆಶಯದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಬಸವರಾಜ ಹುಲ್ಲತ್ತಿ ಮಾತನಾಡಿ, ಇಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಹಲವು ಪ್ರಕ್ರಿಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಂಘಗಳ ಮೂಲಕ ಸುಲಭವಾಗಿ ಆರ್ಥಿಕ ನೆರವು ಒದಗಿಸುವ ಮೂಲಕ ಜನಸಾಮಾನ್ಯರಿಗೆ ಆಸರೆಯಾಗಿದೆ ಎಂದರು.ಲಿಂಗದಹಳ್ಳಿಯ ಡಾ. ವೀರಭದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತ ಜೀವನ ನಡೆಸುತ್ತಿರುವವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಧಾರವಾಡ ಪ್ರಾದೇಶಿಕ ನಿರ್ದೇಶಕ ದಯಾಶೀಲ, ವರ್ತಕರ ಸಂಘದ ಅಧ್ಯಕ್ಷ ಬಸವರಾಜಪ್ಪ ಪಟ್ಟಣಶೆಟ್ಟಿ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಭಾಸ್ಕರ್, ದೊಡ್ಡವೀರಭದ್ರಪ್ಪ ಮೋಟಗಿ, ಚಂದ್ರಶೇಖರ ಬಣಕಾರ, ಮಾರ್ಕಂಡಪ್ಪ ನೇಕಾರ, ಮುತ್ತಣ್ಣ ಯಲಿಗಾರ, ಪಾಂಡುರಂಗ ಪೂಜಾರ, ನಿತ್ಯಾನಂದ ಕುಂದಾಪುರ, ಶಿಲ್ಪಾ ಸಾವಕಾರ, ಡಾ. ರತ್ನಪ್ರಭಾ, ತಾಲೂಕು ಯೋಜನಾಧಿಕಾರಿ ಮಂಜುನಾಥ ಎಂ. ಮತ್ತಿತರರಿದ್ದರು.ಇದಕ್ಕೂ ಪೂರ್ವದಲ್ಲಿ ನಗರದ ಕೆಇಬಿ ಗಣೇಶ ದೇವಸ್ಥಾನದಲ್ಲಿ ಜನಜಾಗೃತಿ ಜಾಥಾಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ ವೇದಮೂರ್ತಿ ಚಾಲನೆ ನೀಡಿದರು. ನಂತರ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಮಾರಂಭದ ಸ್ಥಳಕ್ಕೆ ಬಂದು ತಲುಪಿತು.
ಜಾಥಾದಲ್ಲಿ ಜಾಂಜ್ ಮೇಳ, ಮಹಿಳೆಯರ ಡೊಳ್ಳು ಕುಣಿತ ಹಾಗೂ ಮಕ್ಕಳ ವಿವಿಧ ವೇಷಭೂಷಣಗಳು ವಿಶೇಷ ಆಕರ್ಷಣೆಯಾಗಿದ್ದವು. ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಮತ್ತು ಶಾಂತಿಯುತ ಜೀವನ ನಡೆಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಘೋಷಣೆಗಳು ಹಾಗೂ ಸಂದೇಶಗಳು ಗಮನ ಸೆಳೆದವು.