ಧರ್ಮಸ್ಥಳ ಟಾರ್ಗೆಟ್‌: ಅರ್ಧ ರಾಜ್ಯವೇ ಕಿಡಿ!

| N/A | Published : Aug 14 2025, 01:00 AM IST

ಸಾರಾಂಶ

ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ತರುವ ಹಾಗೂ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ   14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

  ಬೆಂಗಳೂರು :  ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ತರುವ ಹಾಗೂ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಕ್ತರು ಬುಧವಾರ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಗದಗದಲ್ಲಿ ಧರ್ಮಸ್ಥಳ ಭಕ್ತರು ಮತ್ತು ಜನಜಾಗೃತಿ ಸಂಘದಿಂದ ಅಂಬೇಡ್ಕರ್‌ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಕೊಪ್ಪಳದಲ್ಲಿ ಜೈನ್‌ ಸಮಾಜದ ವತಿಯಿಂದ ಅಶೋಕ ವೃತ್ತ ಹಾಗೂ ಕಾವ್ಯಾನಂದ ಪಾರ್ಕ್ ಬಳಿ ಪ್ರತಿಭಟನೆ ನಡೆಯಿತು. ಬಳ್ಳಾರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿ ವೇದಿಕೆ ನೇತೃತ್ವದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು, ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಕೊಪ್ಪಳದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿ ಹಲವು ಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಹಿರೇಕಲ್ಮಠದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನೆ ನಡೆಯಿತು. ಮಂಜುನಾಥ ಸ್ವಾಮಿ ಹಾಗೂ ವೀರೇಂದ್ರ ಹೆಗ್ಗಡೆ ಅವರ ಭಾವಚಿತ್ರಗಳೊಂದಿಗೆ ಮೆರವಣಿಗೆ ನಡೆಸಿದ ಭಕ್ತರು, ಉಪ ವಿಭಾಗಾಧಿಕಾರಿ ವಿ.ಅಭಿಷೇಕ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸುಮಾರು 2 ತಾಸು ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ, ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಘೋಷಣೆ ಕೂಗಿದರು.

ಕಲಬುರಗಿಯಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಜಾಥಾ ನಡೆಸಲಾಯಿತು. ಬಳಿಕ, ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಯಿತು. ಸೇಡಂ ಮಾಜಿ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ್‌ ಮಾತನಾಡಿ, ಅನಾಮಿಕ ಹೇಳಿದಂತೆ ಅಗೆಯುತ್ತಿದ್ದೀರಿ?. ಇನ್ನೆಷ್ಟು ಅಗೆತೀರಿ?. ನಿಮ್ಮ ವಿಧಾನಸೌಧದ ಕೆಳಗೂ ಹೆಣ ಹೂತಿರುವೆ ಅಂದರೆ ಅಲ್ಲೂ ಅಗೀತಿರಾ? ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಮುಸ್ಲಿಂ ಸಮಾಜದ ಮಹಿಳೆಯರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಯಾದಗಿರಿಯಲ್ಲಿ ನೇತಾಜಿ ಸುಭಾಶ್ಚಂದ್ರ ಭೋಸ್‌ ವೃತ್ತದಿಂದ ಮೆರವಣಿಗೆ ಮೂಲಕ ಹೊರಟ ಅಪಾರ ಭಕ್ತರು ಸುಮಾರು ಎರಡು ಕಿ.ಮೀ. ದೂರದವರೆಗೆ ಸಾಗಿ, ಜಿಲ್ಲಾಧಿಕಾರಿ ಕಚೇರಿ‌ ಎದುರಿಗೆ ಬೃಹತ್ ಪ್ರತಿಭಟನೆ ನಡೆಸಿದರು. ನಂತರ, ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಚಿಕ್ಕಮಗಳೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಶಕ್ತಿ ಪ್ರದರ್ಶನ ಮಾಡಿದರು. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಬೇಕು. ಅವರನ್ನು ಕೂಡಲೇ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯಲ್ಲಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ ಭಕ್ತರು, ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಮ್ಮ ಆಕ್ರೋಶ ಹೊರ ಹಾಕಿದರು. ಪ್ರತಿಭಟನೆಗೆ ಹಲವು ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳು ಸಾಥ್ ಕೊಟ್ಟರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಭಾಗಿಯಾಗಿದ್ದರು. ಮುಸ್ಲಿಂ ಮಹಿಳೆಯರೂ ಪ್ರತಿಭಟನೆಯಲ್ಲಿ ಪಾಲ್ಗೊಂಡು ಧರ್ಮಸ್ಥಳದ ಪರ ಧ್ವನಿ ಎತ್ತಿದರು. ಬಳಿಕ, ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದೇ ವೇಳೆ, ಚಿಕ್ಕೋಡಿ, ಹಾಸನ ಸೇರಿ ಇತರೆಡೆಯೂ ಪ್ರತಿಭಟನೆಗಳು ನಡೆದವು.

ವರ್ಷ ಅಗೆದರೂ ಏನೂ

ಸಿಗಲ್ಲ; ಅಕ್ಬರ್ ಪಾಷಾ

ಅನಾಮಿಕನ ದೂರಿನ ಮೇರೆಗೆ ಎಸ್‌ಐಟಿ ಈಗಾಗಲೇ ಅಗೆದಿರುವ ಸ್ಥಳದಲ್ಲಿ ಏನೂ ದೊರಕಿಲ್ಲ. ಹೀಗೆ ಇನ್ನೂ ಒಂದು ವರ್ಷ ಅಗೆದರೂ ನಿಮಗೇನು ಸಿಗುವುದಿಲ್ಲ ಎಂದು ಮುಸ್ಲಿಂ ಮುಖಂಡ ಹಾಗೂ ಕೊಪ್ಪಳ ನಗರಸಭೆ ಸದಸ್ಯ ಅಕ್ಬರ್ ಪಾಷಾ ಎಸ್‌ಐಟಿಗೆ ಸವಾಲು ಹಾಕಿದರು.

ಕೊಪ್ಪಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರು, ದೇವಸ್ಥಾನದ ವಿರುದ್ಧ ವಿನಾಕಾರಣ ಆರೋಪ ಮಾಡುವುದು, ಅವಹೇಳನ ಮಾಡುವುದಕ್ಕೆ ತಕ್ಕ ಶಿಕ್ಷೆಯಾಗುತ್ತದೆ. ಷಡ್ಯಂತ್ರ, ಅಪಪ್ರಚಾರ ನಡೆಸುವವರಿಗೆ ಗಣೇಶ (ಗಣೇಶ ಚತುರ್ಥಿ) ಹಬ್ಬ ಬಂದು ಹೋಗುವುದರೊಳಗಾಗಿ ತಕ್ಕ ಶಾಸ್ತಿ ಆಗುತ್ತದೆ ಎಂದು ಭವಿಷ್ಯ ನುಡಿದರು.

Read more Articles on