ಕನ್ನಡಪ್ರಭ ವಾರ್ತೆ ವಿಜಯಪುರ ಜೀವನ ಶೈಲಿ ಬದಲಾವಣೆಯಿಂದ ಭಾರತವು ವಿಶ್ವದ ಮಧುಮೇಹ ರಾಜಧಾನಿಯಾಗುತ್ತಿದೆ ಎಂದು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ತೇಜಶ್ವಿನಿ ವಲ್ಲಭ ಕಳವಳ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಜೀವನ ಶೈಲಿ ಬದಲಾವಣೆಯಿಂದ ಭಾರತವು ವಿಶ್ವದ ಮಧುಮೇಹ ರಾಜಧಾನಿಯಾಗುತ್ತಿದೆ ಎಂದು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ತೇಜಶ್ವಿನಿ ವಲ್ಲಭ ಕಳವಳ ವ್ಯಕ್ತಪಡಿಸಿದರು.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ. ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆಯೋಜಿಸಿದ ಮಧುಮೇಹ ತಪಾಸಣೆ ಮತ್ತು ಚಿಕಿತ್ಸೆ ಎರಡು ದಿನಗಳ ಉಚಿತ ಶಿಬಿರ ಮತ್ತು ಮಧುಮೇಹ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದು ನಮ್ಮ ದೇಶದಲ್ಲಿ ಜೀವನಶೈಲಿಯ ಬದಲಾವಣೆಯಿಂದ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ರೋಗಕ್ಕೆ ಚಿಕಿತ್ಸೆಗಿಂತ ಕಾಯಿಲೆಯನ್ನು ತಡೆಗಟ್ಟುವುದು ಮುಖ್ಯವಾಗಿದೆ ಎಂದರು.
ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ವಿಜಯಕುಮಾರ ವಾರದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರೀರಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಜ್ಯೋತಿ ಖೋದ್ನಾಪುರ ಮಧುಮೇಹ ನಿಯಂತ್ರಣ ಮತ್ತು ಚಯಾಪಚಯ ಆರೋಗ್ಯದಲ್ಲಿ ಯೋಗದ ಪಾತ್ರವನ್ನು ವಿವರಿಸಿದರು. ಸಹಪ್ರಾಧ್ಯಾಪಕಿ ಡಾ.ಅನುಜಾ.ಎಂ.ಕೆ ಮಧುಮೇಹದ ಮೂಲಭೂತ ಅಂಶಗಳು, ಸಾಮಾನ್ಯ ರಕ್ತದ ಸಕ್ಕರೆ ಮಟ್ಟ ಮತ್ತು ಆರಂಭಿಕ ಪತ್ತೆಯ ಬಗ್ಗೆ ಮಾಹಿತಿ ನೀಡಿದರು. ಸಹ ಪ್ರಾಧ್ಯಾಪಕ ಡಾ.ಶ್ರೀಧರ ಪಾಟೀಲ ಮಧುಮೇಹದಿಂದ ಉಂಟಾಗುವ ದೀರ್ಘಕಾಲಿನ ಅಂಗಾಂಗ ಹಾನಿ ಮತ್ತು ತೊಡಕುಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಪ್ರಾಧ್ಯಾಪಕ ಡಾ.ಶ್ರವಣಕುಮಾರ ಪೋತ್ಕಾರ, ಮಧುಮೇಹಿಗಳ ಆಹಾರ ಪದ್ಧತಿ ಮತ್ತು ಆರೋಗ್ಯಕರ ಜೀವನಶೈಲಿಯ ಮಾರ್ಪಾಡುಗಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗದ ಮುಖ್ಯ ವೈದ್ಯಾಧಿಕಾರಿ ಡಾ.ಈರಣ್ಣ ಧಾರವಾಡಕರ ಉಪಸ್ಥಿತರಿದ್ದರು.