ಸಾರಾಂಶ
ಗ್ಯಾರೆಂಟಿ ಯೋಜನೆಗಳ ಮೂಲಕ ಭ್ರಷ್ಟಾಚಾರವಿಲ್ಲದೆ 52 ಸಾವಿರ ಕೋಟಿ ರುಪಾಯಿಗಳಷ್ಟು ಹಣವನ್ನು ನೇರವಾಗಿ ಜನರಿಗೆ ತಲುಪಿಸುತ್ತಿರುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಾಚಾರವಿಲ್ಲದೆ 52 ಸಾವಿರ ಕೋಟಿ ರುಪಾಯಿಗಳಷ್ಟು ಹಣವನ್ನು ನೇರವಾಗಿ ಜನರಿಗೆ ತಲುಪಿಸುತ್ತಿರುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಹೇಳಿದರು.ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಭಿವೃದ್ಧಿಗೊಳಿಸಲಾಗಿರುವ ನಂದಿಪುರ ಕೆರೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು. ನಮ್ಮ ಇಲಾಖೆಯ ವತಿಯಿಂದ 3.90 ಕೋಟಿ ರು. ವೆಚ್ಚದಲ್ಲಿ ನಂದಿಪುರ ಕೆರೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಲಾಖೆಯು ಕೆರೆಗಳ ಸೌಂದರ್ಯಿಕರಣ ಮಾಡಿದ ಏಕೈಕ ಕೆರೆ ಇದಾಗಿದೆ. ನಗರ ಪ್ರದೇಶಗಳಲ್ಲಿ ಅಭಿವೃದ್ಧಿಗೊಳಿಸುವ ರೀತಿಯಲ್ಲಿ ವಾಕಿಂಗ್ ಟ್ರ್ಯಾಕ್, ಮಕ್ಕಳಿಗೆ ಆಟವಾಡುವ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಹಿರಿಯ ವಕೀಲ ಕೊಡ್ಲಿಪೇಟೆಯ ಚಂದ್ರಮೌಳಿಯವರು ಈ ಯೋಜನೆಯನ್ನು ತರಲು ಬಹಳಷ್ಟು ಪ್ರಯತ್ನ ಪಟ್ಟಿದ್ದಾರೆ. ಅವರ ಪ್ರಯತ್ನದಿಂದಾಗಿ ಹಾಗೂ ಒತ್ತಾಸೆಯಿಂದಾಗಿ ಕೆರೆ ಅಭಿವೃದ್ಧಿಗೊಂಡಿದೆ. ಕೊಡ್ಲಿಪೇಟೆಯ ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಜನಪರ ಆಡಳಿತವನ್ನು ನೀಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ದೇಶದಲ್ಲೇ ಮಾದರಿಯಾಗಿದೆ ಎಂದರು.
ಶಾಸಕ ಮಂತರ್ ಗೌಡ ಮಾತನಾಡಿ, ಸಣ್ಣ ನೀರಾವರಿ ಇಲಾಖೆಯಿಂದ ಅಭಿವೃದ್ಧಿಗೊಳಿಸಲಾಗಿರುವ ಕೆರೆಯನ್ನು ಗ್ರಾಮಸ್ಥರು ಸರಿಯಾಗಿ ನಿರ್ವಹಣೆ ಮಾಡಬೇಕು. ಕೆಲವಷ್ಟು ಕಾಮಗಾರಿಗಳು ಬಾಕಿಯಿದ್ದು, ಅದರ ಅನುಷ್ಠಾನಕ್ಕೆ ಜಿಲ್ಲಾ ಪಂಚಾಯಿತಿ ವತಿಯಿಂದ ಅನುದಾನ ಕೊಡಿಸುವ ಭರವಸೆ ನೀಡಿದರು. ಅಭಿವೃದ್ಧಿಗೊಂಡಿರುವ ನಂದಿಪುರ ಕೆರೆಯನ್ನು ಎಲ್ಲರೂ ಬಳಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅನೈತಿಕ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದರು.ಹಿರಿಯ ವಕೀಲ ಚಂದ್ರಮೌಳಿ, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಪ್ಸರ್ ಬೇಗಂ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.