ವಿಪ ಚುನಾವಣೆ: ಬಾದರ್ಲಿಗೆ ಬಿ ಫಾರಂ ನೀಡಿದ ಡಿಕೆಶಿ

| Published : Jun 25 2024, 12:36 AM IST

ಸಾರಾಂಶ

ಸಿಂಧನೂರಿನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸೋಮವಾರ ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಿದರು.

ವಿಧಾನ ಪರಿಷತ್ ಚುನಾವಣೆ ನಿಮಿತ್ತ 7 ಅಭ್ಯರ್ಥಿಗಳ ಹೆಸರು ಜೊತೆಗೆ ಜಗದೀಶ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಬಸನಗೌಡ ಬಾದರ್ಲಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ನಂತರ ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ಕೆಲ ಕಾಂಗ್ರೆಸ್ ಮುಖಂಡರು ದೆಹಲಿಗೆ ತೆರಳಿ ಬಸನಗೌಡ ಬಾದರ್ಲಿಗೆ ಎಂಎಲ್‌ಸಿ ಟಿಕೆಟ್ ಕಟ್ ಮಾಡಿಸಲು ಪ್ರಯತ್ನಿಸಿದ್ದರೆಂದು ಹೇಳಲಾಗುತ್ತಿದೆ.

ಕೊನೆಗೂ ಕಾಂಗ್ರೆಸ್ ಪಕ್ಷದಿಂದ ಬಿ ಫಾರಂ ಪಡೆದು ಬಸನಗೌಡ ಬಾದರ್ಲಿ ತಮ್ಮ ಬಲವನ್ನು ವೃದ್ಧಿ ಮಾಡಿಕೊಂಡಿದ್ದಾರೆ. ಜು.12ಕ್ಕೆ ಎಂಎಲ್‌ಸಿ ಚುನಾವಣೆ ನಡೆಯಲಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.