ಸಾರಾಂಶ
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ರಾಯಚೂರು
ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು. ಅನುದಾನ ಬಳಕೆ ಮಾಡದವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜುಲೈ ಅಂತ್ಯದವರೆಗಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು.ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನಗಳಿಗೆ ಸಂಬಂಧಿಸಿದಂತೆ ನಿಯಮಿತ ಸಮಯಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು. ಕಾಲಮಿತಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು. ಅನುದಾನ ಬಾಕಿ ಉಳಿಸಿದರೆ ಆಯಾ ಇಲಾಖೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಸೂಚನೆ ನೀಡಿದರು.
ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಕ್ರೀಯಾಯೋಜನೆಯನ್ನು ರೂಪಿಸಿ, ಸಂಬಂಧಪಟ್ಟ ಇಲಾಖೆ ಅಥವಾ ಅಧಿಕಾರಿಗಳಿಂದ ಅನುಮೊದನೆ ಪಡೆದುಕೊಳ್ಳಬೇಕು. ಮುಂದಿನ ಸಭೆಯೊಳಗೆ ಪ್ರತಿ ಇಲಾಖೆಯಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲೇಬೇಕು ಎಂದು ಹೇಳಿದರು.ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಾದ ಚಿದನಂದ, ಮೆಹಬೂಬ್ ಜಿಲಾನಿ, ಜಗದೀಶ್ ಗಂಗಣ್ಣನವರು, ಡಾ. ಅಶೋಕ ಕೋಲಕಾರ, ವಿರೇಶ ನಾಯಕ, ಬಸವರಾಜ, ಕಾಳಪ್ಪ ಬಡಿಗೇರ, ಮಂಜುನಾಥ ರೆಡ್ಡಿ, ಚಂದ್ರಶೇಖ ದೇಸಾಯಿ, ವೆಂಕಟೇಶ ಗಲಗ, ಕೃಷ್ಣ ಸೇರಿ ಅನೇಕರು ಇದ್ದರು.