ಸಾರಾಂಶ
ಮುಂದಿನ ಸಭೆಯೊಳಗಾಗಿ ಲೋಪ ತಿದ್ದಿಕೊಳ್ಳದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಕಂಪ್ಲಿಗೆ ತಾಲೂಕು ಉಸ್ತುವಾರಿ ಅಧಿಕಾರಿ
ಕನ್ನಡಪ್ರಭ ವಾರ್ತೆ ಕಂಪ್ಲಿಮುಂದಿನ ಸಭೆಯೊಳಗಾಗಿ ಲೋಪ ತಿದ್ದಿಕೊಳ್ಳದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಂಪ್ಲಿ ತಾಲೂಕು ಉಸ್ತುವಾರಿ, ಶಿರಸಿ ಎಸಿ ಕಾವ್ಯ ಎ.ವಿ. ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಂದು ಸಭೆ ನಡೆಸುವುದಾಗಿ ಮುಂಚಿತವಾಗಿ ತಿಳಿಸಿದ್ದರೂ ಅಧಿಕಾರಿಗಳು ಪೂರ್ವ ಸಿದ್ಧತೆ ಕೈಗೊಂಡಿಲ್ಲ. ಅಲ್ಲದೇ ತಮ್ಮ ಇಲಾಖೆಗಳ ಬಗ್ಗೆ ತಮಗೆ ಸರಿಯಾದ ಮಾಹಿತಿ ಇಲ್ಲ. ಹೀಗೆ ಮುಂದುವರೆದರೆ ಸಾರ್ವಜನಿಕರಿಗೆ ಪಾರದರ್ಶಕ ಸೇವೆ ನೀಡುವುದಾದರೂ ಹೇಗೆ ಎಂದು ಪ್ರಶ್ನಿಸಿದರಲ್ಲದೆ, ತಿಂಗಳಿಗೊಮ್ಮೆ ನಡೆಸುವ ಸಭೆಯಲ್ಲಿ ತಾವು ಪೂರ್ವ ಸಿದ್ಧರಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ಹಾಗೂ ಬುಕ್ ಲೈಟ್ ನೊಂದಿಗೆ ಆಯಾ ಇಲಾಖೆಯ ತಾಲೂಕು ಅಧಿಕಾರಿಗಳೇ ಭಾಗವಹಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.ಇಲ್ಲಿನ ಸಣಾಪುರ ರಸ್ತೆ ಬಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕು ಉಸ್ತುವಾರಿ ಕಾವ್ಯ ಕೆ.ವಿ. ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ, ಔಷಧಿಗಳ ಪೂರೈಕೆ, ಹೆರಿಗೆ ಕೇಂದ್ರ, ಶಸ್ತ್ರಚಿಕಿತ್ಸಾ ವಿಭಾಗ, ಕುಡಿವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ವಿಷಯಗಳ ಕುರಿತು ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆಸ್ಪತ್ರೆಗೆ ಭೇಟಿ ನೀಡಿದಾಗ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದಿರುವುದು, ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ, ಔಷಧಿಗಳನ್ನು ಹೊರಗಡೆ ತೆಗೆದುಕೊಳ್ಳಲು ಚೀಟಿ ಬರೆದುಕೊಡುವ ಕುರಿತು ಸಾರ್ವಜನಿಕರಿಂದ ದೂರು ಬಂದಿವೆ. ತಾಪಂ ಹಾಗೂ ಪುರಸಭೆ ಅಧಿಕಾರಿಗಳು ಕ್ರಮ ವಹಿಸಿ ಆಸ್ಪತ್ರೆ ಮುಂಭಾಗದ ಶುದ್ಧ ಕುಡಿಯುವ ನೀರಿನ ಘಟಕ ಏ.15ರ ಒಳಗಾಗಿ ಸರಿಪಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮುದಾಯ ಆರೋಗ್ಯ ಕೇಂದ್ರದಲ್ಲಿನ ನ್ಯೂನ್ಯತೆ ಸರಿ ಪಡಿಸಿಕೊಂಡು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು. ಒಂದು ವೇಳೆ ಬೇಜವಾಬ್ದಾರಿ ತೋರಿದಲ್ಲಿ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಶಿವರಾಜ್ ಶಿವಪುರ, ತಾಪಂ ಇಒ ಆರ್.ಕೆ. ಶ್ರೀಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.