ಸಾರಾಂಶ
ಚಿತ್ರದುರ್ಗ: ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕೂಡ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಎಲ್ಲಿಯಾದರೂ ಖಾಲಿ ಕೊಡಗಳ ಪ್ರದರ್ಶನ, ನೀರಿಗಾಗಿ ಪ್ರತಿಭಟನೆ ಎಂಬಿತ್ಯಾದಿ ದೃಶ್ಯಗಳು ಕಂಡು ಬಂದರೆ ಶಿಸ್ತುಕ್ರಮ ಜರುಗಿಸುವುದು ಗ್ಯಾರಂಟಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಚಿತ್ರದುರ್ಗ: ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕೂಡ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಎಲ್ಲಿಯಾದರೂ ಖಾಲಿ ಕೊಡಗಳ ಪ್ರದರ್ಶನ, ನೀರಿಗಾಗಿ ಪ್ರತಿಭಟನೆ ಎಂಬಿತ್ಯಾದಿ ದೃಶ್ಯಗಳು ಕಂಡು ಬಂದರೆ ಶಿಸ್ತುಕ್ರಮ ಜರುಗಿಸುವುದು ಗ್ಯಾರಂಟಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ಈಗಾಗಲೇ ಪ್ರಾರಂಭವಾಗಿದ್ದು, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ಜವಾಬ್ದಾರಿಯನ್ನು ನಿರ್ವಹಣೆ ಮಾಡಬೇಕು. ಆಯಾ ತಾಲೂಕು ತಹಸೀಲ್ದಾರ್‌ಗಳು ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತಾಗಿ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳ ಸಭೆ ನಡೆಸಿ, ಪ್ರತಿ ಗ್ರಾಮವಾರು ಹಿಮ್ಮಾಯಿತಿ ಪಡೆಯಬೇಕು ಎಂದರು. ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿದ್ದು, ಬಹುತೇಕ ಎಲ್ಲ ಕೆರೆಗಳು ತುಂಬಿವೆ. ಕೊಳವೆಬಾವಿಗಳು ರಿಚಾರ್ಜ್ ಆಗಿವೆ. ಹಾಗಾಗಿ ಈ ಬಾರಿಯ ಬೇಸಿಗೆಯನ್ನು ಸಮರ್ಪಕ ಹಾಗೂ ಉತ್ತಮವಾಗಿ ನಿರ್ವಹಣೆ ಮಾಡಬಹುದಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಿಶೇಷ ಸಭೆಗಳನ್ನು ನಡೆಸಿ, 15ನೇ ಹಣಕಾಸು ನಿಧಿ, ವಿಶೇಷ ಅನುದಾನ, ತೆರಿಗೆ ಸಂಗ್ರಹ ಹಣವನ್ನು ನಿಯಮಾನುಸಾರ ಬಳಕೆ ಮಾಡಬೇಕು ಎಂದು ಹೇಳಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಆಯಾ ತಾಲೂಕು ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಮಾತನಾಡಿ, ಈ ಬಾರಿಯ 15ನೇ ಹಣಕಾಸಿನ ಅನುದಾನವನ್ನು ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಯಮ ಮೀರಿ ಅನುದಾನ ಬಳಕೆ ಮಾಡುವಂತಿಲ್ಲ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಒಟ್ಟು 189 ಗ್ರಾಮ ಪಂಚಾಯಿತಿಗಳಿಂದ ಶೇ.77ಕ್ಕೂ ಹೆಚ್ಚು ಕರವಸೂಲಾತಿ ಮಾಡಲಾಗಿದ್ದು, ಒಟ್ಟು 24 ಕೋಟಿ ರು. ತೆರಿಗೆ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಹಿರಿಯೂರು ತಾಲೂಕಿನ ಪ್ರಸ್ತುತ 11 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ದಿಂಡಾವರ, ಗೌಡನಹಳ್ಳಿ, ಉಡುವಳ್ಳಿ ಮತ್ತು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹಿರಿಯೂರು ತಾಪಂ ಇಒ ಸಭೆಗೆ ಮಾಹಿತಿ ನೀಡಿದರು. ಸದ್ಯದ ಪರಿಸ್ಥಿತಿಯಲ್ಲಿ ಹಿರಿಯೂರು ತಾಲೂಕು ಹೊರತುಪಡಿಸಿ, ಬೇರೆ ಯಾವ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಹಿರಿಯೂರು ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಇದರಿಂದ ಕುಡಿಯುವ ನೀರಿನ ಸಮಸ್ಯೆಗಳು ಬಗೆಹರಿಯಲಿವೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಏಪ್ರಿಲ್, ಮೇ ಹಾಗೂ ಜೂನ್ ಮಾಹೆವರೆಗೂ ತಿಂಗಳುವಾರು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ವಿವರ ನೀಡಬೇಕು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆ ಇಲ್ಲ. ಇನ್ನೂ 9 ತಿಂಗಳವರೆಗೂ ಮೇವು ಲಭ್ಯತೆ ಇದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಬೇಕು ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಬಸನಗೌಡ ಪಾಟೀಲ್ ಸೇರಿದಂತೆ ತಹಸೀಲ್ದಾರ್‌ಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.