ಅಯ್ಯಪ್ಪ ಮಾಲಾಧಾರಿಗಳಿಗೆ ಸಿಎಂ ಪರಿಹಾರ ನಿಧಿ ನೆರವು ಕುರಿತು ಚರ್ಚೆ: ಗೃಹ ಸಚಿವ ಪರಮೇಶ್ವರ

| Published : Dec 25 2024, 12:47 AM IST

ಅಯ್ಯಪ್ಪ ಮಾಲಾಧಾರಿಗಳಿಗೆ ಸಿಎಂ ಪರಿಹಾರ ನಿಧಿ ನೆರವು ಕುರಿತು ಚರ್ಚೆ: ಗೃಹ ಸಚಿವ ಪರಮೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.

ಹುಬ್ಬಳ್ಳಿ:

ಸಿಲಿಂಡರ್‌ ಸೋರಿಕೆಯಿಂದ ನಡೆದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ 9 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ನೆರವು ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಇಲ್ಲಿನ ಕೆಎಂಸಿಆರ್‌ಐಗೆ ಮಂಗಳವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಪರಿಹಾರ ನೀಡಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದರು.

ಮೊದಲು ಗಾಯಾಳುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಗುಣಪಡಿಸುವುದು ನಮ್ಮ ಮುಂದಿರುವ ಸವಾಲು. ನಂತರ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ಬಗ್ಗೆ ಆಂತರಿಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗಾಯಾಳುಗಳ ಕುಟುಂಬಸ್ಥರೊಂದಿಗೆ ಮಾತನಾಡಿದ ಸಚಿವರು, ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ. ಚಿಂತಿಸಬೇಡಿ ಎಂದು ಧೈರ್ಯ ತುಂಬಿದರು.

ಈ ವೇಳೆ ಸ್ಲಂ ಬೋರ್ಡ್‌ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ ಸಿ.ಆರ್, ಕೆಎಂಸಿಆರ್‌‌ಐ‌ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ, ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಕಲಗೌಡ ಪಾಟೀಲ ಸೇರಿದಂತೆ ಹಲವರಿದ್ದರು.ಸಮಸ್ಯೆ ಪರಿಹರಿಸುವೆ: ಲಾಡ್

ಉತ್ತರ ಕರ್ನಾಟಕದ 7 ಜಿಲ್ಲೆಗಳ ಅತ್ಯಂತ ಕಠಿಣ ಪ್ರಕರಣಗಳು ಕೆಎಂಸಿಆರ್‌‌ಐಗೆ ಬರುತ್ತವೆ. ಉತ್ತಮ ಚಿಕಿತ್ಸೆ ನೀಡುವಲ್ಲಿ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಸಂಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳು ಸಹ ಆಗಿವೆ. ಆದರೆ, ಕೆಲವು ಸಣ್ಣ ಪುಟ್ಟ ಲೋಪಗಳು ನಡೆದಿರುವ ಕುರಿತು ಗಮನಕ್ಕೆ ಬಂದಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಆದ್ಯತೆ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.