ಜಸಾಮಾನ್ಯರ ಅಹವಾಲುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ

| Published : Jul 13 2024, 01:42 AM IST

ಜಸಾಮಾನ್ಯರ ಅಹವಾಲುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳದ ಪೆರ್ವಾಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಜನಸಾಮಾನ್ಯರು ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಕಾಲಮಿತಿಯೊಳಗೆ ನಿಯಮಾನುಸಾರ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಇಂದು ಕಾರ್ಕಳದ ಪೆರ್ವಾಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಾರ್ವಜನಿಕರಿಂದ ಸ್ಪೀಕೃತಗೊಂಡ ಅರ್ಜಿಯನ್ನು ಅಲ್ಪಕಾಲದಲ್ಲಿಯೇ ಪರಿಹಾರ ಒದಗಿಸಲಾಗುವುದು. ಅಲ್ಲದೇ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ಜನರು ಆನ್‌ಲೈನ್ ಮೂಲಕ ಪರಿಶೀಲಿಸಲು ಅನುಕೂಲವಾಗುವಂತೆ ಐ.ಪಿ.ಜಿ.ಆರ್.ಎಸ್‌.ನಲ್ಲಿ ಅಪ್‌ಲೋಡ್ ಮಾಡಲಾಗುವುದು ಎಂದ ಅವರು, ಅನುದಾನ ಹಾಗೂ ಇನ್ನಿತರ ರಾಜ್ಯ ಮಟ್ಟದಲ್ಲಿ ಬಗೆಹರಿಯುವಂತಹ ಸಮಸ್ಯೆಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಹಾಗೂ ಸ್ಥಳೀಯವಾಗಿ ಬಗೆ ಹರಿಯುವಂತಹ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್‌ಪಿ ಡಾ. ಅರುಣ್ ಕೆ., ಡಿಎಫ್‌ಓ ಗಣಪತಿ, ಎಎಸ್‌ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ, ತಹಸೀಲ್ದಾರ್ ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ೯೨ ಅರ್ಜಿಗಳು ಸಲ್ಲಿಕೆಯಾಗಿತ್ತು. ಕಾರ್ಕಳದ ವಿವೇಕ್ ಡಿ. ಎಂಬವರು ಪರಶುರಾಮ ಥಿಂ ಪಾರ್ಕ್ ಬಗ್ಗೆ ಜಿಲ್ಲಾಧಿಕಾರಿಗೆ ಅಹವಾಲು ಸಲ್ಲಿಸಿದರು.‌

ವಿವೇಕ್ ಪ್ರಶ್ನೆಗೆ ಉತ್ತರಿಸಿದ ಶಾಸಕ ಸುನಿಲ್ ಕುಮಾರ್, ಈ ಬಗ್ಗೆ ಸಿಓಡಿ ತನಿಖೆ ನಡೆಯುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹೋಗಿ ಎಂದು ಉತ್ತರಿಸಿದರು. ಈ ವೇಳೆ ಪುರಸಭಾ ಸದಸ್ಯ ಶುಭದ ರಾವ್‌, ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದಕ್ಕೆ ಶಾಸಕ ಸುನೀಲ್ ಕುಮಾರ್ ವಿರೋಧ ವ್ಯಕ್ತಪಡಿಸಿದರು. ಆಗ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಶುಭದ ರಾವ್ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಶುಭದರಾವ್, ಡಿವೈಎಸ್ಪಿ ಹಾಗೂ ಶಾಸಕರ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

* ಪತ್ರಕರ್ತರ ಆಕ್ರೋಶ:

ಸುದ್ದಿಗಳಿಗಾಗಿ ವೀಡಿಯೋ ಸೆರೆ ಹಿಡಿಯುತ್ತಿದ್ದ ಪರ್ತಕರ್ತರಿಗೆ ವೀಡಿಯೋ ಮಾಡದಂತೆ ಜಿಲ್ಲಾಧಿಕಾರಿ ಸೂಚಿಸಿದರು. ಈ ವೇಳೆ ಪೊಲೀಸರು ವೀಡಿಯೋ ಮಾಡದಂತೆ ಪರ್ತಕರ್ತರನ್ನು ತಡೆಯಲು ಮುಂದಾದರು. ಇದರಿಂದ ಆಕ್ರೋಶಗೊಂಡ ಪತ್ರಕರ್ತರು, ಪೊಲೀಸರ ಕ್ರಮ ಖಂಡಿಸಿದಾಗ ತೀವ್ರ ಮಾತಿನ ಚಕಮಕಿ ನಡೆಯಿತು.