ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿ ಮಾಡಿ

| Published : Jun 18 2025, 04:11 AM IST

ಸಾರಾಂಶ

ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳಿಗಾಗಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳಿಗಾಗಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಅವರು ಜೂನ್ 21 ರಂದು ಮಂಡ್ಯಕ್ಕೆ ಆಗಮಿಸಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ 2024-25 ಮತ್ತು 2025-26 ನೇ ಸಾಲಿನ ಏಪ್ರಿಲ್ ತಿಂಗಳವರೆಗೂ ಸ್ವೀಕರಿಸಿ ವಿಲೇವಾರಿ ಮಾಡಿದ ಅರ್ಜಿಗಳು ಹಾಗೂ ಬಾಕಿ ಇರುವ ಅರ್ಜಿಗಳ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.

ಮಾಹಿತಿ ಹಕ್ಕು ಕಾಯ್ದೆಯಡಿ ಮೇಲ್ಮನವಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮಾಹಿ, ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಗೊಂದಲದ ಅಂಶಗಳು ಇದ್ದಲ್ಲಿ ಅದನ್ನು ಪಟ್ಟಿ ಮಾಡಿ ಆಯುಕ್ತರ ಗಮನಕ್ಕೆ ತಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಬಾರದು ಎಂದು ತಿಳಿಸಿದರು.

ಆಯುಕ್ತರು ಜೂನ್ 21 ರಂದು ಮಧ್ಯಾಹ್ನ 12 ಗಂಟೆಗೆ ಜಿಪಂ ಕಾವೇರಿ ಸಭಾಂಗಣದಲ್ಲಿ ಆಯುಕ್ತರು ಮಾಹಿತಿ ಹಕ್ಕು ಕಾಯಿದೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ ಮತ್ತು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 12:30 ಕ್ಕೆ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸಕಾಲ ಅರ್ಜಿಗಳ ಸರಿಯಾಗಿ ವಿಲೇವಾರಿ ಆಗದಿರುವುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಸಕಾಲ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಅರ್ಜಿಗಳು ನಿಗಧಿತ ಸಮಯದಲ್ಲಿ ವಿಲೇವಾರಿ ಮಾಡದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದಂಡ ವಿಧಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಎಂ.ಬಾಬು, ಡಿಡಿಪಿಐ ಶಿವರಾಮೇಗೌಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಡಾ. ಪುಷ್ಪಾ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಪುಷ್ಪಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಲಾ ಎಸ್. ಎಚ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.