ಸಾರಾಂಶ
ಕೊಪ್ಪಳ:
ಅನ್ನಭಾಗ್ಯ ಯೋಜನೆಯಡಿ ಸರ್ಕಾರ ನಿಗದಿಪಡಿಸಿರುವ ಪ್ರಮಾಣದಂತೆ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕೆಲವು ನ್ಯಾಯಬೆಲೆ ಅಂಗಡಿಯವರು ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುವ ಅಕ್ಕಿಯ ಪ್ರಮಾಣದಲ್ಲಿ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು. ಕಡಿಮೆ ಪ್ರಮಾಣದಲ್ಲಿ ಅಕ್ಕಿ ವಿತರಣೆ ಮಾಡಿದರೆ, ಅಂತಹ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು. ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಬೇಕು ಎಂದರು.
ವಿದ್ಯುತ್ ಬಿಲ್ ಬಾಕಿ ವಸೂಲಾತಿ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿ, ಸಿಬ್ಬಂದಿ ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಪ್ರಗತಿ ಸಾಗಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು. ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ದೂರು, ಸಮಸ್ಯೆಗಳಿದ್ದರೆ, ಅವುಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಸೌಲಭ್ಯ ದೊರಕುವಂತೆ ಅನುಷ್ಠಾನಾಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಬಡ ಜನರ, ಅಂಗನವಾಡಿ, ಶಾಲೆ ಮತ್ತು ಕುಡಿಯುವ ನೀರಿಗೆ ಸಂಬಂಧಿಸಿದ ವಿದ್ಯುತ್ ಬಿಲ್ ಬಾಕಿಯಿದ್ದರೆ, ನೇರವಾಗಿ ವಿದ್ಯುತ್ ಕಡಿತಗೊಳಿಸುವಂತಹ ಕಾರ್ಯಕ್ಕೆ ಹೋಗಬಾರದು. ವಿದ್ಯುತ್ ಬಿಲ್ ಪಾವತಿಸುವಂತೆ ಸಂಬಂಧಪಟ್ಟವರಿಗೆ ಸಮಾಧಾನದಿಂದ ತಿಳಿಸಬೇಕು ಎಂದು ಹೇಳಿದರು. ಯುವನಿಧಿ ಯೋಜನೆಯಡಿ ಜಿಲ್ಲೆಯ ಪ್ರಗತಿ ವಿವರದೊಂದಿಗೆ ನೋಂದಣಿಯಡಿ ಬಾಕಿ ಇರುವ ಅರ್ಜಿಗಳ ಸಂಖ್ಯೆ, ಸ್ಥಿತಿ-ಗತಿ ಹಾಗೂ ಇತರ ಅಗತ್ಯ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆನಂತರ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ. ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.