ಕೊಡಗಿನ 29,584 ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಚಾಲನೆ

| Published : Feb 23 2024, 01:52 AM IST

ಕೊಡಗಿನ 29,584 ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ‘ರಾಗಿ ಮಾಲ್ಟ್’ ವಿತರಿಸುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ದೊರಕಿತು. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ‘ರಾಗಿ ಮಾಲ್ಟ್’ ವಿತರಿಸುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿದರು.

ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಿಸಿ ಮಾತನಾಡಿದ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ, ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ ಎಂದು ಹೇಳಿದರು.

ಬೆಳಗ್ಗೆ ಕೆನೆ ಭರಿತ ಸಕ್ಕರೆ ಹಾಕಿದ ಹಾಲು, ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಹಾಗೂ ಸಕ್ಕರೆ ಮಿಶ್ರಿತ ಹಾಲಿಗೆ ರಾಗಿ ಹೆಲ್ತ್ ಮಿಕ್ಸ್ ಒಳಗೊಂಡ ಮಾಲ್ಟ್‌ ವಿತರಿಸಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಬಿಸಿಊಟ ನೀಡಲಾಗುತ್ತದೆ ಎಂದು ಹೇಳಿದರು. ಸಿರಿಧಾನ್ಯ ವರ್ಷ: 2023 ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿರುವ ಹಿನ್ನೆಲೆ ಸರ್ಕಾರ ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ನಿವಾರಿಸಲು, ಅನೀಮಿಯ ತಡೆಗಟ್ಟಲು ಉತ್ತಮ ಆರೋಗ್ಯಕರ ಬೆಳವಣಿಗೆಯೊಂದಿಗೆ ಶಾಲೆಯ ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಸರ್ಕಾರ ರಾಗಿ ಮಾಲ್ಟ್ ವಿತರಿಸಲು ಮುಂದಾಗಿದೆ ಎಂದು ಹೇಳಿದರು.

ಸಿರಿಧಾನ್ಯಗಳ ಆಹಾರದ ಬಳಕೆಯ ಉಪಯುಕ್ತತೆ ಮತ್ತು ಸಿರಿಧಾನ್ಯಗಳಲ್ಲಿ ದೊರೆಯುವ ಬಹು ಪೌಷ್ಠಿಕಾಂಶಗಳ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು, ಬೆಳಗ್ಗಿನ ಪ್ರಾರ್ಥನಾ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಕ್ಷೀರಭಾಗ್ಯ ಯೋಜನೆಯಡಿ ಬಿಸಿ ಹಾಲು ತಯಾರಿಸಿ ವಿತರಿಸುವ ಸಂದರ್ಭದಲ್ಲಿ ರಾಗಿ ಮಾಲ್ಟ್‌ ವಿತರಿಸಲಾಗುತ್ತದೆ ಎಂದು ಶಶಿಕಲಾ ವಿವರಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಸಂಸ್ಥೆಯವರು ಬಹುಪೌಷ್ಠಿಕಾಂಶವುಳ್ಳ, ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಮಿಶ್ರಣವನ್ನು ಉಚಿತವಾಗಿ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ಹಿಂದೆ ಮನೆಗಳಲ್ಲಿ ಸಿರಿಧಾನ್ಯಗಳನ್ನು ಹೆಚ್ಚು ಬಳಸಲಾಗುತ್ತಿತ್ತು, ಹುರುಳಿ, ಅವರೆ, ತೊಗರಿ, ಅವಸಂದೆ ಇಂತಹ ಕಾಳುಗಳ ಆಹಾರವನ್ನು ಉಪಯೋಗಿಸುತ್ತಿದ್ದರು. ಇತ್ತೀಚೆಗೆ ಬಳಕೆ ಕಡಿಮೆಯಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಠಿಕತೆ ಹೋಗಲಾಡಿಸಲು ರಾಗಿ ಮಾಲ್ಟು ವಿತರಿಸಲಾಗುತ್ತಿದೆ ಎಂದರು.

ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ ಮಾತನಾಡಿ, ಸರ್ಕಾರ ಬಿಸಿಯೂಟ, ಬಿಸಿಹಾಲು, ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಇವುಗಳನ್ನು ಸರಿಯಾಗಿ ಬಳಸಿಕೊಂಡು ಓದಿನ ಕಡೆಗೆ ಗಮನಹರಿಸಬೇಕು ಎಂದು ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಚ್.ಕೆ.ಸುಶೀಲ ಮಾತನಾಡಿ, ಪೂರ್ವ ಪ್ರಾಥಮಿಕ (ಎಲ್‌ಕೆಜಿ) ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಆರಂಭವಾಗಿದೆ. ಹಾಗೆಯೇ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಆರಂಭವಾಗಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ನಗರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ ಮಾಹಿತಿ ನೀಡಿ, ಶಾಲೆಯ 7 ನೇ ತರಗತಿ ವಿದ್ಯಾರ್ಥಿಗಳು ಹಾಕಿ(ಪ್ರೀತಮ್), ಪುಟ್ಬಾಲ್(ಕಾವ್ಯ), ಅಥ್ಲೆಟಿಕ್(ಮೇಘನ್), ಗವಿನ್, ಬಾಲಜಿ, ಪೂರ್ವಿತ ಗ್ವಾಲಿಯಾರ್, ರಾಂಚಿ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದರು. ಆ ನಿಟ್ಟಿನಲ್ಲಿ ಕರಾಟೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಕೋರಿದರು.

ನಗರದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ್ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಹೇಮಂತ್ ಕುಮಾರ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ರೇಷ್ಮ ತೇಜ, ಜಗದೀಶ್ ಮತ್ತಿತರರಿದ್ದರು.