ಸಾರಾಂಶ
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿಗೊಂಡ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಸೋಮವಾರ ನಡೆಯಿತು.ಜನಜಾಗೃತಿ ಸಮಿತಿ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಂಜೂರಾತಿ ಪತ್ರವನ್ನು ವಿತರಿಸಿದರು.ನಂತರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನಿರಂತರವಾಗಿ ನೀಡುತ್ತಿದ್ದು, ಇದರಿಂದ ಜನಸಾಮಾನ್ಯರು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ. ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗಳಾಗುತ್ತಿವೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿ ಸಂಬಳ ನೀಡುತ್ತಿರುವುದು, ಡೆಸ್ಕ್ ಮತ್ತು ಬೆಂಚ್‌ಗಳ ವಿತರಣೆಯಿಂದ ಶಾಲೆಗಳಲ್ಲಿನ ಹೆಚ್ಚಿನ ಸಮಸ್ಯೆ ಇಲ್ಲವಾಗಿದೆ. ಯೋಜನೆ ವತಿಯಿಂದ ನೀಡುತ್ತಿರುವ ಸವಲತ್ತುಗಳನ್ನು ಎಲ್ಲರು ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಮುಖ್ಯ ಅತಿಥಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಸರ್ಕಾರ ಮಾಡುವ ಕೆಲಸವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಬಡವರಿಗೆ ಉನ್ನತ ಶಿಕ್ಷಣ ಪಡೆಯುವುದು ಇಂದು ದುಬಾರಿಯಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಕಷ್ಟು ಯೋಜನೆಗಳನ್ನು ನೀಡುತ್ತಿದೆ. ಶಿಕ್ಷಣದಿಂದ ನಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ದೇಶದ ಆಸ್ತಿಯನ್ನಾಗಿ ರೂಪಿಸಬೇಕೆಂದರು.ದೇವಾಲಯ ಜೀರ್ಣೋದ್ಧಾರಕ್ಕೆ ೭೩ ಕೋಟಿ ರು. ನೆರವು:
ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ನಂತರ ವೃತ್ತಿಪರ ಶಿಕ್ಷಣವಾದ ೩೨ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಮಾಸಿಕ ವೇತನ ಪಾವತಿಸುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ವ ಸಹಾಯ ಸಂಘದ ಮೂಲಕ ೩ ಲಕ್ಷ ಸಾಲ ಶೇ.೭ರ ಬಡ್ಡಿದರದಲ್ಲಿ ನೀಡುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ೫೮೧ ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. ಸರ್ಕಾರಿ ಶಾಲೆಗಳಿಗೆ ೭೩ ಲಕ್ಷ ವೆಚ್ಚದಲ್ಲಿ ೯೦೦ ಸೆಟ್ ಬೆಂಚ್ ಮತ್ತು ಡೆಸ್ಕ್‌ಗಳನ್ನು ನೀಡಲಾಗಿದೆ. ಇದರೊಂದಿಗೆ ದೇವಾಲಯ ಜೀರ್ಣೋದ್ಧಾರಕ್ಕೆ ೭೩ ಕೋಟಿ ನೆರವು ನೀಡುವುದರೊಂದಿಗೆ ಹತ್ತು ಹಲವು ಸಮಾಜ ಮುಖಿ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.ವೇದಿಕೆಯಲ್ಲಿ ಸಂಸ್ಥೆಯ ಕ್ಷೇತ್ರ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಇದ್ದರು.