ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

| Published : Feb 06 2024, 01:33 AM IST

ಸಾರಾಂಶ

ರಾಮನಗರ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ರಾಮನಗರ ಜಿಲ್ಲೆಯ 115 ವಿದ್ಯಾರ್ಥಿಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಮನಗರ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ರಾಮನಗರ ಜಿಲ್ಲೆಯ 115 ವಿದ್ಯಾರ್ಥಿಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಹಾಗೂ ಜಿಲ್ಲಾಧ್ಯಕ್ಷ ಸತೀಶ್ ಅವರು, ಕಳೆದ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಮಕ್ಕಳಿಗೆ ಒಂದು ಸಾವಿರ ಪ್ರೋತ್ಸಾಹ ಧನ ಹಾಗೂ ನೆನಪಿನ ಕಾಣಿಕೆ ನೀಡಿದರು.

ಈ ವೇಳೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಮಾತನಾಡಿ, 7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಸೇರಿದಂತೆ ಸರಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಫೆ.27ರಂದು ಬೆಂಗಳೂರಿನಲ್ಲಿ ಬೃಹತ್ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸುವ ಬೃಹತ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಸಿಎಂ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.

ಸರ್ಕಾರಿ ನೌಕರರ ಮಕ್ಕಳು ದೊಡ್ಡ ಹುದ್ದೆ ಪಡೆಯುವ ಸಂಬಂಧ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಶೀಘ್ರದಲ್ಲಿ ಉಚಿತವಾಗಿ ಐಎಎಸ್ ಹಾಗೂ ಕೆಎಎಸ್ ತರಬೇತಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಹೆಚ್ಚಾಗಿರುತ್ತದೆ. ಮಕ್ಕಳು ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಹೋದ ನಂತರ, ಸಾಕಿದ ಪೋಷಕರನ್ನು ಮರೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಉನ್ನತ ಸ್ಥಾನಕ್ಕೆ ತೆರಳಿದ ನಂತರ ಪೋಷಕರನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳಬೇಕು. ಇದರು ಸಮಾಜದಲ್ಲಿನ ಅನಾಥಾಶ್ರಮ ಕಡಿಮೆ ಮಾಡುತ್ತವೆ ಎಂದು ಷಡಕ್ಷರಿ ಹೇಳಿದರು.

ಈ ವೇಳೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಖಜಾಂಚಿ ಡಾ.ಸಿದ್ದರಾಮಣ್ಣ, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕಿ ಡಾ.ಪದ್ಮಾ, ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹ ರಾಜು, ರಾಮನಗರ ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರಾದ ಚಂದ್ರಶೇಖರ್, ಶಿವಲಿಂಗೇಗೌಡ, ಪ್ರಕಾಶ್, ಜಿಲ್ಲಾ ಕರ‍್ಯದರ್ಶಿ ಶಿವಸ್ವಾಮಿ, ಪ್ರಚಾರ ಸಮಿತಿ ಅದ್ಯಕ್ಷ ಸತೀಶ್ ಪಾದ್ರಹಳ್ಳಿ, ಹಿರಿಯ ಉಪಾಧ್ಯಕ್ಷ ಬೈರಪ್ಪ, ಕರ‍್ಯದರ್ಶಿ ರಾಜೇಗೌಡ, ಸಂಜಿವೇಗೌಡ, ರಂಗಪ್ಪ, ಚಂದ್ರಹಾಸ್ ಪ್ರದೀಪ್ ಉಪಸ್ಥಿತರಿದ್ದರು.5ಕೆಆರ್ ಎಂಎನ್ 2.ಜೆಪಿಜಿ

ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.