ಸಾರಾಂಶ
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್ ಸೂಟ್ ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್ ಸೂಟ್ ವಿತರಿಸಲಾಯಿತು.ಗ್ರಾಮ ಪಂಚಾಯಿತಿ ಸದಸ್ಯ ಕೊಳಂಬೆ ಸುಭಾಶ್ ಮಾತನಾಡಿ, ಹಿಂದಿನ ಕಾಲದಲ್ಲಿ ಇಂತಹ ಸೌಲಭ್ಯ ಇರಲಿಲ್ಲ. ಇಂದಿನ ಕಾಲದಲ್ಲಿ ಸರಕಾರಿ ಶಾಲೆಗಳಲ್ಲಿ ಸಮವಸ್ತ್ರ, ಉಚಿತ ಬೋಜನ, ಕ್ಷೀರ ಭಾಗ್ಯ, ಮೊಟ್ಟೆ ವಿತರಿಸುತ್ತಿದೆ. ದಾನಿಗಳಿಂದ ಉಚಿತ ನೋಟ್ ಪುಸ್ತಕ, ಕ್ರೀಡಾ ಸಾಮಗ್ರಿ ಎಲ್ಲವನ್ನೂ ನೀಡುತ್ತಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಇಳಿಮುಖಗೊಳ್ಳುತ್ತಿದೆ. ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಹೆಚ್ಚಿನ ಆಸಕ್ತಿ ತೋರಬೇಕೆಂದು ಮನವಿ ಮಾಡಿದರು.
ಸರ್ಕಾರದಿಂದ ನೀಡುವ ಶೂ ಹಾಗೂ ಎರಡು ಜೊತೆ ಚೀಲಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ವಿತರಿಸಿ ಮಾತನಾಡಿ, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ, ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳಿದ್ದು ಅದನ್ನು ಬಳಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಮೂಡಬೇಕೆಂದು ಕರೆ ನೀಡಿದರು.ಮುಖ್ಯ ಶಿಕ್ಷಕ ಮೂರ್ತಿ ಶಾಲೆಗೆ ಮೂಲಭೂತ ಸೌಲಭ್ಯಗಳ ಅಗತ್ಯದ ಬಗ್ಗೆ ಮನವಿ ಮಾಡಿದರು.
ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನಾಥ್, ಶಿಕ್ಷಕಿಯರಾದ ಜಿ.ಕೆ.ಪಾರ್ವತಿ, ಸುಜಾತಾ, ಸುಮಿತ್ರಾ ಮತ್ತಿತರರು ಇದ್ದರು.