ಕಂಪ್ಲಿ: ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಯಾವುದೇ ಲೋಪದೋಷಗಳಿಲ್ಲದೇ ಪಾರದರ್ಶಕವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು.

ಪಟ್ಟಣದ 17ನೇ ವಾರ್ಡ್‌ನ ತೆಗ್ಗಿನಮಠ ಪ್ರದೇಶದಲ್ಲಿ ಮಂಗಳವಾರ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಚುನಾವಣಾ ಆಯೋಗದ ಮಹತ್ವದ ಕಾರ್ಯಕ್ರಮವಾಗಿದೆ. ಪ್ರತಿ ಅರ್ಹ ಮತದಾರನ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸುವ ಉದ್ದೇಶದಿಂದ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಸಾರ್ವಜನಿಕರು ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ ಕೆಲವೆಡೆ ನೆಟ್‌ವರ್ಕ್ ಸಮಸ್ಯೆ ಹಾಗೂ ಸರ್ವರ್ ಕಾರ್ಯ ನಿರ್ವಹಣೆಯಲ್ಲಿನ ವಿಳಂಬ ಕಂಡುಬಂದಿದೆ. ಇದರಿಂದ ಡಿಜಿಟಲ್ ಮಾಹಿತಿಯನ್ನು ಅಪ್‌ಲೋಡ್ ಮಾಡುವ ಕಾರ್ಯದಲ್ಲಿ ಸ್ವಲ್ಪ ತೊಂದರೆ ಉಂಟಾಗಿದೆ. ಆದರೂ ಈಗಾಗಲೇ ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ನಮೂನೆಗಳ ವಿತರಣೆ ಹಾಗೂ ಡಿಜಿಟಲೀಕರಣ ಕಾರ್ಯವನ್ನು ಸಮರ್ಪಕವಾಗಿ ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.

ಬಿಎಲ್‌ಒಗಳ ಕಾರ್ಯಕ್ಷಮತೆ, ಕಾರ್ಯವೈಖರಿ ಹಾಗೂ ಮನೆಮನೆಗೆ ಭೇಟಿ ನೀಡಿ ಕಾರ್ಯನಿರ್ವಹಿಸುವ ವಿಧಾನವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ, ದೋಷರಹಿತವಾಗಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಷಯ ನಿರ್ವಾಹಕ ಎ. ನಿರಂಜನಮೂರ್ತಿ, ಬಿಎಲ್‌ಒ ಗಂಗಮ್ಮ, ಗ್ರಾಮ ಆಡಳಿತ ಅಧಿಕಾರಿ ವಮ್ಮಾರಿ ರಮೇಶ್, ಎಸ್‌ಡಿಎ ಸುರೇಶ್, ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.