ಜಿಲ್ಲಾಡಳಿತದಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ

| Published : Jul 11 2025, 12:32 AM IST

ಜಿಲ್ಲಾಡಳಿತದಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ
Share this Article
  • FB
  • TW
  • Linkdin
  • Email

ಸಾರಾಂಶ

ಹನ್ನೇರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕೆ.ಎ. ಸೌಮ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು.

ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.

ಹಡಪದ ಅಪ್ಪಣ್ಣ ಅವರ ಕಾಲ ಕ್ರಿ.ಶ.1160 ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿಯ ಬಸಬೀನಾಳ ಅವರ ಜನ್ಮ ಸ್ಥಳವಾಗಿದೆ ಎಂದು ತಿಳಿಸಿದರು.

ಹಡಪದ ಅಪ್ಪಣ್ಣ ಅವರ ಇಷ್ಟದೇವರು ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತ ನಾಮದ ಮೂಲಕ 250 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಆ ದಿಸೆಯಲ್ಲಿ ವಚನ ಚಳುವಳಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಸೌಮ್ಯ ಹೇಳಿದರು.

ಹಡಪ ಎಂದರೆ ಚೀಲ ಎಂದರ್ಥ, ಕಾಯಕವೇ ಕೈಲಾಸ ಎಂಬಂತೆ ಚೀಲದಲ್ಲಿ ಉಪಕರಣ ಇಟ್ಟುಕೊಂಡು ವೃತ್ತಿ ನಡೆಸಿಕೊಂಡು ಹೋಗುತ್ತಿದ್ದರು. ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಬಲಗೈ ಬಂಟನಂತಿದ್ದು ಹಡಪದ ಅಪ್ಪಣ್ಣ ಅವರು ಕಾರ್ಯನಿರ್ವಹಿಸಿದ್ದಾರೆ ಎಂದರು.

ಹಡಪದ ಅಪ್ಪಣ್ಣ ಅವರು ತಮ್ಮ ಜೀವಿತ ಅವಧಿಯಲ್ಲಿ ಬಸವಣ್ಣನವರಿಗೆ ಹತ್ತಿರವಾಗಿದ್ದರು. ನಡೆ ನುಡಿಯಲ್ಲಿ ಬದುಕಿನಲ್ಲಿ ಆದರ್ಶಮಯವಾಗಿದ್ದರು ಎಂದು ಹೇಳಿದರು.

ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಎಲ್ಲಾ ಸಮಾಜದವರು ಸೇರಿ ಸಾಮಾಜಿಕ ಕ್ರಾಂತಿಯನ್ನು ಉಂಟು ಮಾಡಿದರು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲಾ ವಚನಕಾರರು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ, ಶಿವಶರಣ ಹಡಪದ ಅಪ್ಪಣ್ಣ ಅವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು. ಬಸವಣ್ಣನವರಿಗೆ ಆತ್ಮೀಯರಾಗಿದ್ದ ಹಡಪದ ಅಪ್ಪಣ್ಣ ಅವರು ಮೌಢ್ಯತೆ ಮತ್ತು ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.

ವೈಚಾರಿಕತೆ ಹಾಗೂ ವೈಜ್ಞಾನಿಕತೆಗೆ ಒತ್ತು ನೀಡಿದ್ದ ಹಡಪದ ಅಪ್ಪಣ್ಣ ಅವರು ಅನುಭವ ಮಂಟಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ನುಡಿದರು.

ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೆ.ಎಸ್.ದೊರೇಶ್, ತಹಸೀಲ್ದಾರರಾದ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ಬಿ.ಸಿ.ಶಂಕರಯ್ಯ, ರಮ್ಯ, ಇತರರು ಇದ್ದರು.