ಜಿಲ್ಲಾಡಳಿತದ ವತಿಯಿಂದ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಆಚರಣೆ ಯಶಸ್ವಿಗೊಳಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲಾಡಳಿತದ ವತಿಯಿಂದ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಆಚರಣೆ ಯಶಸ್ವಿಗೊಳಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನ.1 ರಂದು ಬೆಳಗ್ಗೆ 7ಕ್ಕೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸಬೇಕು. ಬೆಳಗ್ಗೆ 8ಕ್ಕೆ ನಗರದ ಜಿಲ್ಲಾಡಳಿತ ಭವನದಲ್ಲಿ ಹಾಗೂ ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು, ಇದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಅಂದು ಬೆಳಗ್ಗೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶೋಭಾಯಾತ್ರೆ ವ್ಯವಸ್ಥಿತವಾಗಿನಡೆಯಬೇಕು. ಕ್ರೀಡಾಂಗಣದಲ್ಲಿ ಸೂಕ್ತ ವೇದಿಕೆ ನಿರ್ಮಾಣ, ಕವಾಯತು (ಪಥಸಂಚಲನ) ಸಿದ್ಧತೆ, ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಹಾಗೂ ಅತಿಥಿ-ಗಣ್ಯರನ್ನು ಆಹ್ವಾನಿಸುವುದು ಸಹಿತ ಯಾವುದೇ ಲೋಪವಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕು. ಕ್ರೀಡಾಂಗಣ ಮತ್ತು ಮೆರವಣಿಗೆಯ ಸ್ಥಳಗಳಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ನುರಿತ ವೈದ್ಯರ ತಂಡ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಾಧನೆಗಳು, ಕನ್ನಡ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರ/ಪ್ರಾತ್ಯಕ್ಷಿಕೆಗಳ ಪ್ರದರ್ಶನ ಹಾಗೂ ಸುಂದರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ನಗರದ ಪ್ರಮುಖ ವೃತ್ತಗಳ ಅಲಂಕಾರ ಮತ್ತು ನಗರದಾದ್ಯಂತ ನೈರ್ಮಲ್ಯ ಹಾಗೂ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಬೇಕು ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುದೀಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ, ಮೀನುಗಾರಿಕೆ ಉಪನಿರ್ದೇಶಕ ಶರಣಬಸಪ್ಪ, ಭಾವೈಕ್ಯತಾ ಸಮಿತಿಯ ಪ್ರಮುಖರಾದ ಬಾಬು ದೋಕಾ, ವಿಶ್ವನಾಥ ಸಿರವಾರ, ಭೀಮು ಪೂಜಾರಿ, ಶೇಖ್ ಇಮ್ರಾನ್, ಮಲ್ಲಿಕಾರ್ಜುನ ಜಲ್ಲಪ್ಪನೊರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

-----ಫೋಟೊ------

17ವೈಡಿಆರ್‌1

ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್ ನೇತೃತ್ವದಲ್ಲಿ ಶನಿವಾರ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.