ಸರ್ಕಾರಿ ಕಚೇರಿಗಳಲ್ಲಿ ಹಿರಿಯ ನಾಗರಿಕರ ಅರ್ಜಿಗಳು ಹಾಗೂ ದೂರುಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡುವುದು ಕಡ್ಡಾಯವಾಗಿದೆ. ವಿಳಂಬ ಧೋರಣೆ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

- ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ಪಡೆಯಲು ಡಿಸಿ ಗಂಗಾಧರ ಸ್ವಾಮಿ ಸಲಹೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಸರ್ಕಾರಿ ಕಚೇರಿಗಳಲ್ಲಿ ಹಿರಿಯ ನಾಗರಿಕರ ಅರ್ಜಿಗಳು ಹಾಗೂ ದೂರುಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡುವುದು ಕಡ್ಡಾಯವಾಗಿದೆ. ವಿಳಂಬ ಧೋರಣೆ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.

ಇಲ್ಲಿನ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2026 ಉದ್ಪಾಟಿಸಿ ಅವರು ಮಾತನಾಡಿದರು.

ತಹಸೀಲ್ದಾರ್ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಇತರ ಯಾವುದೇ ಇಲಾಖೆಯ ಕಚೇರಿಗಳಲ್ಲಿ ಹಿರಿಯ ನಾಗರಿಕರು ಒಂದೆರಡು ಬಾರಿ ಅಲೆದಾಡಿದರೂ ಕೆಲಸವಾಗದಿದ್ದಲ್ಲಿ, ಸಾರ್ವಜನಿಕರು ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಅಥವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ನೀಡಬಹುದು ಎಂದು ತಿಳಿಸಿದರು.

ಹಿರಿಯ ನಾಗರಿಕರು ಆದಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ. ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಂತ ನುರಿತ ಹಾಗೂ ಅನುಭವಿ ವೈದ್ಯರಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚವು ಕಡಿಮೆಯಾಗಲಿದೆ ಹಾಗೂ ಅಲ್ಲಿನ ವೈದ್ಯರು ಅನಗತ್ಯ ಚಿಕಿತ್ಸೆ ಅಥವಾ ಪರೀಕ್ಷೆಗಳನ್ನು ನೀಡುವುದಿಲ್ಲವಾದ್ದರಿಂದ ಹಿರಿಯ ನಾಗರಿಕರು ಧೈರ್ಯವಾಗಿ ಸರ್ಕಾರಿ ಆಸ್ಪತ್ರೆಗಳ ಸೇವೆ ಪಡೆದುಕೊಳ್ಳಬೇಕು. ಆರೋಗ್ಯ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕು, ಗುಣಮಟ್ಟದ ಆಹಾರ ಸೇವಿಸಬೇಕು ಎಂದರು.

ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಶಶಿಧರ್‌ ಮಾತನಾಡಿ, ರಾಷ್ಟ್ರೀಯ ಹಿರಿಯ ನಾಗರಿಕರ ಆರೋಗ್ಯ ರಕ್ಷಣೆ ಕಾರ್ಯಕ್ರಮ (ಎನ್‌ಪಿಎಚ್‌ಸಿಇ) ಸರ್ಕಾರದ ವತಿಯಿಂದ ಕಳೆದ ಕೆಲವು ವರ್ಷಗಳಿಂದ ''''''''ರಾಷ್ಟ್ರೀಯ ಹಿರಿಯ ನಾಗರಿಕರ ಆರೋಗ್ಯ ರಕ್ಷಣೆ ಕಾರ್ಯಕ್ರಮ'''''''' ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಇಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಟಗೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಆಸ್ಪತ್ರೆಯ ಎನ್‌ಸಿಡಿ ಕ್ಲಿನಿಕ್ ಹಾಗೂ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್‌ಸಿ) ಉಚಿತವಾಗಿ ಪರೀಕ್ಷೆ, ಚಿಕಿತ್ಸೆ ಮತ್ತು ಔಷಧಗಳನ್ನು ನೀಡಲಾಗುತ್ತಿದೆ. ಯೋಗ, ಧ್ಯಾನ, ಪ್ರಾಣಾಯಾಮ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಮೂಲಕವೂ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಟಿ.ಶೇಖರ್‌, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಸಿ.ರಂಗೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಾನಾಯ್ಕ್‌, ಜಿಲ್ಲಾ ಆಯುಷ್‌ ವೈದ್ಯಾಧಿಕಾರಿ ಡಾ.ಯೋಗೇಂದ್ರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಶ್ಮಿ ಹಾಗೂ ಹಿರಿಯ ನಾಗರೀಕರು ಉಪಸ್ಥಿತರಿದ್ದರು.

- - -

(ಟಾಪ್‌ ಕೋಟ್‌)

ಸರ್ಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳು ಸದಾ ಹಿರಿಯ ನಾಗರಿಕರ ಬೆಂಬಲಕ್ಕೆ ನಿಲ್ಲಲಿದ್ದು, ಸೂಕ್ತ ಪರಿಹಾರ ಒದಗಿಸಲಾಗುವುದು. ಹಿರಿಯರು ವಾಯುವಿಹಾರಕ್ಕೆ ತೆರಳುವ ಸಂದರ್ಭ ಕುಟುಂಬದ ಸದಸ್ಯರಿಗೆ ತಿಳಿಸಿರಬೇಕು. ಜಾಗರೂಕರಾಗಿರಬೇಕು.

- ಜಿ.ಎಂ. ಗಂಗಾಧರ ಸ್ವಾಮಿ, ಡಿಸಿ.

- - -

-ಕೆಡಿವಿಜಿ41:

ದಾವಣಗೆರೆಯಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿದರು.