ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆ.28ರಿಂದ ಮಾರ್ಚ್17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.ಸೋಮವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 6, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 3, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 5 ಮತ್ತು ಸೊರಬದಲ್ಲಿ 2 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 19, 009 ವಿದ್ಯಾರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 7,188 ಬಾಲಕರು ಹಾಗೂ 10,567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 17,755 ರೆಗ್ಯೂಲರ್ ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗಾಗಿ 3 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮೂರು ಜನರ ಅಧಿಕಾರಿಗಳ 12 ತಂಡವನ್ನು ರಚಿಸಲಾಗಿದ್ದು, ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಭಾರತೀಯ ನ್ಯಾಯಸಂಹಿತೆ 163 ಪ್ರಕಾರ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚಿಸಲಾಗಿದೆ ಎಂದರು.ವಿಶೇಷವಾಗಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತ ಬಸ್ ಸೌಲಭ್ಯ ಒದಗಿಸಲಾಗಿದ್ದು, ಬಸ್ ಸಂಚರಿಸುವ ಮಾರ್ಗದಲ್ಲಿನ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದ ಪ್ರವೇಶ ಪತ್ರವನ್ನು ತೋರಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ ಆತಂಕವಿಲ್ಲದೇ ಸಮಾಧಾನಚಿತ್ತರಾಗಿ ಪರೀಕ್ಷೆಯಲ್ಲಿ ಭಾಗವಹಿಸಿ, ಈವರೆಗಿನ ಅವಧಿಯಲ್ಲಿ ತಾವು ಓದಿದ ವಿಷಯವನ್ನು ಅರಿತು ಸಕಾಲಿಕವಾಗಿ ಉತ್ತರಿಸುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗುವಂತೆ ಸೂಚಿಸಿದ ಅವರು, ಕಲಿಕೆಯಿಂದ ಹಿಂದುಳಿದ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ವಿಶೇಷ ತರಗತಿಗಳ ಮೂಲಕ ಬೋಧನೆ ನಡೆಸಲಾಗಿದೆ ಎಂದರು.
ಜಿಪಂ ಸಿಇಒ ಎನ್.ಹೇಮಂತ್ ಮಾತನಾಡಿ, ಪೋಷಕರ ಕೋರಿಕೆಯ ಮೇರೆಗೆ ಪ್ರತಿನಿತ್ಯ ಸಂಜೆ ವಿಶೇಷ ಕಲಿಕಾ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದರು.
ಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಅವರು ಉಪಸ್ಥಿತರಿದ್ದರು.ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ: ಸಿಇಒ ಎನ್.ಹೇಮಂತ್
ಸಿಇಒ ಎನ್.ಹೇಮಂತ್ ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗುವ ಪ್ರಶ್ನೆಪತ್ರಿಕೆಗಳು ನಕಲಿ ಪ್ರಶ್ನೆಪತ್ರಿಕೆಗಳೇ ಹೊರೆತು ಮೂಲ ಪ್ರಶ್ನೆಪತ್ರಿಕೆಗಳಲ್ಲ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು ಎಂದು ಜಿಪಂ ಸಿಇಒ ಎನ್.ಹೇಮಂತ್ ಮನವಿ ಮಾಡಿದರು.ಜಿಲ್ಲೆಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಪ್ರತಿ ವಿದ್ಯಾರ್ಥಿಯ ಕಲಿಕೆಯಲ್ಲಿ ಹಿನ್ನೆಡೆಗೆ ಇರುವ ಸೂಕ್ಷ್ಮ ಕಾರಣಗಳನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ಸಿಇಟಿ ತರಬೇತಿ ತರಗತಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ ನೋಡಿಕೊಳ್ಳುವ ಸದಾಶಯ ಹೊಂದಲಾಗಿದೆ ಎಂದು ತಿಳಿಸಿದರು.