ಸಾರಾಂಶ
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ನೇತೃತ್ವದಲ್ಲಿ ವಿಜಯೋತ್ಸವ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದ್ದ 4 ರಾಜ್ಯಗಳ ವಿಧಾನ ಸಭೆ ಚುನಾವಣೆ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಂದ ಭಾನುವಾರ ನಗರದಲ್ಲಿ ಸಂಭ್ರಮಾಚರಣೆ ನಡೆಯಿತು.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಹಾಗೂ ತೆಲಂಗಾಣ ರಾಜ್ಯಗಳ ಮತ ಎಣಿಕೆ ಪೈಕಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಘಡದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಲ್ಮರುಡಪ್ಪ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹಾಗೂ ಬಿಜೆಪಿ ಸಿದ್ಧಾಂತ ಮೆಚ್ಚಿ ಜನತೆ 3 ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ತೆಲಂಗಾಣ ದಲ್ಲಿ ಸಹ ಪಕ್ಷ ಉತ್ತಮ ಸಾಧನೆ ಮಾಡಿದೆ. ಅಲ್ಲಿ ಕಾಂಗ್ರೆಸ್‌ನದ್ದು ಆಕಸ್ಮಿಕವಾಗಿ ಗೆಲುವಾಗಿದೆ ಎಂದು ಹೇಳಿದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜಶೆಟ್ಟಿ ಮಾತನಾಡಿ, ಬಿಜೆಪಿ ಮೂರು ರಾಜ್ಯಗಳಲ್ಲಿ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನೆಲಕಚ್ಚಿದೆ. ತೆಲಂಗಾಣದಲ್ಲೂ ನಿರೀಕ್ಷೆಗೆ ಮೀರಿ ಪಕ್ಷ ಸ್ಥಾನಗಳನ್ನು ಗಳಿಸಿದೆ ಎಂದರು.
ಪಕ್ಷದ ಮುಖಂಡ ಸಿ.ಆರ್.ಪ್ರೇಂಕುಮಾರ್ ಮಾತನಾಡಿ, ದೇಶದ ಜನತೆ ನರೇಂದ್ರ ಮೋದಿ ಅವರ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿರುವುದು ಇಂದಿನ ಫಲಿತಾಂಶದಿಂದ ವ್ಯಕ್ತವಾಗುತ್ತಿದೆ. ಮುಂದೆ ಕರ್ನಾಟಕದಲ್ಲೂ ಇದೇ ವಾತಾವರಣ ಬರಲಿದೆ ಎಂದರು.ನಗರ ಬಿಜೆಪಿ ಅಧ್ಯಕ್ಷ ಮಧು ಕುಮಾರರಾಜ್ ಅರಸ್, ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ನರೇಂದ್ರ, ಕೇಶವ, ಮಂಜುನಾಥ್ ಭಾಗವಹಿಸಿದ್ದರು.
3 ಕೆಸಿಕೆಎಂ 4ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿದ ಹಿನ್ನಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಚಿಕ್ಕಮಗಳೂರಿನಲ್ಲಿ ವಿಜಯೋತ್ಸವ ಆಚರಿಸಿದರು.