ಸಾರಾಂಶ
ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಹಾಜರಾಗಿದ್ದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಬ್ರಾಹ್ಮಣ ಸಭಾದ ಪದಾಧಿಕಾರಿಗಳು ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿರವರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಗಾಯತ್ರಿ ದೀಕ್ಷೆ ಪಡೆದು ಧರಿಸಿದ್ದ ಜನಿವಾರವನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಹಾಜರಾಗಿದ್ದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಬ್ರಾಹ್ಮಣ ಸಭಾದ ಪದಾಧಿಕಾರಿಗಳು ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿರವರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಶಿವಮೊಗ್ಗ ಹಾಗೂ ಬೀದರ್ ನಗರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಬಂದಾಗ ಗಾಯತ್ರಿ ದೀಕ್ಷೆ ಪಡೆದು ಧರಿಸಿದ್ದ ಜನಿವಾರವನ್ನು ತೆಗೆಸಿ ಹಾಕಿರುವ ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ. ಇದು ನಮ್ಮ ನಂಬಿಕೆ, ಜೀವನಶೈಲಿ, ಸಂಸ್ಕಾರ, ಪದ್ಧತಿಗಳಿಗೆ ಮಾಡಿರುವ ಅಪಮಾನ. ಕೂಡಲೇ ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.