ಗದಗ: ಜಿಲ್ಲಾಡಳಿತ ಭವನದಲ್ಲೇ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫಿಕಾ ಹಳ್ಳೂರು ಹಾಗೂ ಅವರ ಕಾರು ಚಾಲಕ ಮೌಲಾನಾ ಅವರು ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬಾಲಮಂದಿರದಲ್ಲಿ ಖಾಲಿ ಇದ್ದ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಡಲು ಅಭ್ಯರ್ಥಿಯೊಬ್ಬರಿಂದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫಿಕಾ ಹಳ್ಳೂರು ಆರಂಭದಲ್ಲಿ ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಮಾತುಕತೆಯ ಬಳಿಕ ₹15 ಸಾವಿರಕ್ಕೆ ಒಪ್ಪಂದವಾಗಿತ್ತು.

ಲಂಚ ನೀಡಲು ಇಚ್ಛಿಸದ ಅಭ್ಯರ್ಥಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದು, ಅಧಿಕಾರಿಯ ಸೂಚನೆಯಂತೆ ಕಾರು ಚಾಲಕ ಮೌಲಾನಾ ಅಭ್ಯರ್ಥಿಯಿಂದ ₹15 ಸಾವಿರ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಹಣ ಸಮೇತ ವಶಕ್ಕೆ ಪಡೆದರು. ಬಳಿಕ ಲಂಚಕ್ಕೆ ಸೂಚನೆ ನೀಡಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫಿಕಾ ಹಳ್ಳೂರು ಅವರನ್ನೂ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಕಾರ್ಯಾಚರಣೆಯ ನಂತರ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ಸೇರಿದಂತೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಕಾರ್ಯಾಚರಣೆಯನ್ನು ಲೋಕಾಯುಕ್ತ ಡಿವೈಎಸ್‌ಪಿ ಲೋಕೇಶ್ ನೇತೃತ್ವದಲ್ಲಿ ನಡೆಸಲಾಗಿದೆ. ಸಿಪಿಐ ಪರಮೇಶ್ವರ ಕವಟಗಿ, ಎಸ್.ಎಸ್. ತೇಲಿ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಲಕ್ಷ್ಮೇಶ್ವರದಲ್ಲಿ ಪತ್ರಿಕಾ ದಿನಾಚರಣೆ ಇಂದು


ಲಕ್ಷ್ಮೇಶ್ವರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನವನ್ನು ಜು. 25ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಮಹಂತಿನಮಠದ ರುದ್ರಭೂಮಿ ಸ್ವಚ್ಛತೆಯೊಂದಿಗೆ ಆಚರಿಸಲಾಗುತ್ತಿದೆ.ಸಮಾರಂಭದ ಸಾನ್ನಿಧ್ಯವನ್ನು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಸ್ವಾಮಿಗಳು ವಹಿಸುವರು. ಸಮಾರಂಭದ ಉದ್ಘಾಟನೆಯನ್ನು ತಹಸೀಲ್ದಾರ್ ಎಂ. ಧನಂಜಯ ಅವರು ನೆರವೇರಿಸುವರು.ಅಧ್ಯಕ್ಷತೆಯನ್ನು ಪತ್ರಕರ್ತ ಸಂಘದ ತಾಲೂಕು ಅಧ್ಯಕ್ಷ ಅಶೋಕ ಸೊರಟೂರ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಕಾನಿಪ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ಕಕಾನಿಪ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ರಾಜ್ಯ ಕಾರ್ಯದರ್ಶಿ ಸಮಿತಿ ಸದಸ್ಯ ಅರುಣಕುಮಾರ ಹಿರೇಮಠ, ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ನಿಂಗಪ್ಪ ಚಾವಡಿ, ಜಿಲ್ಲಾ ಕಕಾನಿಪ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಕಳಸಾಪೂರ, ತಾಪಂ ಇಒ ಮಂಜುಳಾ ಹಕಾರಿ, ಪಿಎಸ್‌ಐ ನಾಗರಾಜ ಗಡಾದ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.