ಸಾರಾಂಶ
ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಂವಿಧಾನದ ಜಾಗೃತಿ ಜಾಥಾವನ್ನು ಎಲ್ಲಾ ಕಡೆ ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಮೈಸೂರು
ಸಂವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕರೆ ನೀಡಿದರು.ನಗರದ ಪುರಭವನ ಬಳಿ ಸಮಾಜ ಕಲ್ಯಾಣ ಇಲಾಖೆಯು ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಡಾ. ಅಂಬೇಡ್ಕರ್ ಅವರು ಯಾವ ಉದ್ದೇಶವನ್ನು ಇಟ್ಟುಕೊಂಡು ಸಂವಿಧಾನವನ್ನು ರಚನೆ ಮಾಡಿದ್ದರು ಎಂಬುದನ್ನು ಸಂವಿಧಾನದ ಪೂರ್ವ ಪೀಠಿಕೆಯಲ್ಲಿ ಬರೆದಿದ್ದಾರೆ ಎಂದು ಹೇಳಿದರು.
ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಂವಿಧಾನದ ಜಾಗೃತಿ ಜಾಥಾವನ್ನು ಎಲ್ಲಾ ಕಡೆ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈ ಬೈಕ್ ರ್ಯಾಲಿಯಲ್ಲಿ ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡು, ಸಂವಿಧಾನದ ಪೀಠಿಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.ಇದಕ್ಕೂ ಮೊದಲು ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಎಲ್ಲರಿಗೂ ಜಿಲ್ಲಾಧಿಕಾರಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.