ಸಾರಾಂಶ
ದಕ್ಷಿಣ ಕನ್ನಡ ಜಿಲ್ಲಾ ವಿವಿಧೋದ್ದೇಶದ ಉದ್ದೇಶಿತ ಕಾರ್ಮಿಕರ ಸಹಕಾರ ಸಂಘದ ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲಾ ವಿವಿಧೋದ್ದೇಶದ ಉದ್ದೇಶಿತ ಕಾರ್ಮಿಕರ ಸಹಕಾರ ಸಂಘದ ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ವಿವಿಧೋದ್ದೇಶ ಉದ್ದೇಶಿತ ಕಾರ್ಮಿಕರ ಸಂಘ ಸ್ಥಾಪಿಸುವುದರಿಂದ ಹೊರಗುತ್ತಿಗೆ ನೌಕರರಿಗೆ ಅನುಕೂಲವಾಗುತ್ತದೆ. ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಮತ್ತು ತಮ್ಮ ತಾಲೂಕು ಕಚೇರಿಗಳಲ್ಲಿನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಸಿಬ್ಬಂದಿಗಳ ವಿವರಗಳನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು.ಸಂಘದ ರಚನೆಯ ಕುರಿತು ನೋಂದಣಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತ್ಯಾದಿ ವಿಷಯಗಳ ಸಂಕ್ಷಿಪ್ತ ಮಾಹಿತಿಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ಸಲ್ಲಿಸಲು ಹಾಗೂ ಕ್ರೋಢೀಕೃತ ದಾಖಲೆಗಳನ್ನು ಸಿದ್ಧಪಡಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.ಹೊರಗುತ್ತಿಗೆ ನೌಕರರಿಗೆ ಅನುಕೂಲವಾಗುವ ಸಂಘ ರಚಿಸುವ ಕುರಿತು ಪೂರ್ವಭಾವಿ ಸಭೆ ನಡೆಸಬೇಕು, ಅವರಿಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು. ಸಂಘ ಸ್ಥಾಪನೆಯ ಅವಶ್ಯಕತೆ ಬಗ್ಗೆ ಹಾಗೂ ಬೀದರ್ ಜಿಲ್ಲೆಯ ಮಾದರಿಯಲ್ಲಿ ಪ್ರಾಯೋಗಿಕವಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆರಂಭಿಸುವುದರ ಜೊತೆಗೆ ನಮ್ಮ ಜಿಲ್ಲೆಯಲ್ಲಿಯೂ ಸಹ ಅದೇ ಮಾದರಿಯಲ್ಲಿ ಸಂಘ ರಚನೆ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರರಿದ್ದರು.