ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

| Published : Jul 02 2025, 11:51 PM IST

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ನ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಶಾಲಾ ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ನ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಮಕ್ಕಳ ಮಾಹಿತಿಯನ್ನು ಡಿಡಿಪಿಯು ಹಾಗೂ ಡಿಡಿಪಿಐ ಅಧಿಕಾರಿಗಳು ನೀಡಬೇಕು ಎಂದರು.ಶಂಕಿತ ಪಾರ್ಸೆಲ್‌ ಗಮನಿಸಿ:

ಜಿಲ್ಲಾ ಎಸ್ಪಿ ಡಾ. ಅರುಣ್ ಕೆ. ಮಾತನಾಡಿ, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಗಾಂಜಾ ಬೆಳೆಯುತ್ತಿರುವ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಸಂಶಯಿತ ಪಾರ್ಸೆಲ್‍ಗಳ ಬಗ್ಗೆ ಹಾಗೂ ಅಂಚೆಗೆ ನೀಡಲಾದ ವಿಳಾಸದಲ್ಲಿ ವಾಸ್ತವ್ಯವಿಲ್ಲದೆ ಅಂಚೆ ಮೂಲಕ ಬರುವ ಪಾರ್ಸೆಲ್‍ಗಳನ್ನು ತೆಗೆದುಕೊಳ್ಳುವವರನ್ನು ಪರಿಶೀಲಿಸಬೇಕು. ಅವರ ಮಾಹಿತಿಯನ್ನು ಪ್ರತ್ಯೇಕವಾಗಿ ದಾಖಲು ಮಾಡಬೇಕು. ಇದರೊಂದಿಗೆ ಕಾರ್ಮಿಕ ಇಲಾಖೆಯವರು ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು ಎಂದು ಅವರು ಸೂಚಿಸಿದರು.ಆರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ತಪಾಸಣೆ ವೇಳೆ ತಪ್ಪಿತಸ್ಥರು ಇದ್ದಲ್ಲಿ ಸೂಕ್ತ ಕ್ರಮ ಕೈಗೊಂಡು ಅವರ ವ್ಯಾಪಾರ ಪರವಾನಿಗೆ ರದ್ದು ಮಾಡಬೇಕು ಎಂದರು.

ಡಿಸಿಪಿ ಸಿದ್ದಾರ್ಥ್ ಗೋಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್‌ ಕುಮಾರ್ ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಇದ್ದರು.