ಸಾರಾಂಶ
ಮಾ. 25 ರಂದು ಪರೀಕ್ಷೆ ಆರಂಭ । 50 ಕೇಂದ್ರಗಳಲ್ಲಿ ಪರೀಕ್ಷೆ । ಅಧಿಕಾರಿ ಮತ್ತು ಸಿಬ್ಬಂದಿ ಪೂರ್ವ ಸಿದ್ಧತಾ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಎಸ್.ಎಸ್.ಎಲ್.ಸಿ. ಪರೀಕ್ಷೆ ಮಾ. 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಅಧಿಕಾರಿ ಸಿಬ್ಬಂದಿ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಕಲ್ಪಿಸ ಬೇಕಲ್ಲದೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಆಳವಡಿಸುವಂತೆ ತಿಳಿಸಿದ ಅವರು, ಪರೀಕ್ಷೆ ನಡೆಯುವ ದಿನಗಳಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕಲ್ಲದೆ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಕೊಠಡಿ ಮೇಲ್ವಿಚಾರಕರು ಮೊಬೈಲ್ ಬಳಸಲು ಅವಕಾಶವಿರುವುದಿಲ್ಲ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದೆ ಸುಸೂತ್ರವಾಗಿ ನಡೆಸುವಂತೆ ಹೇಳಿದರು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಅಲ್ಲದೇ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಮುಚ್ಚುವಂತೆ ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹೊರತುಪಡಿಸಿ ಬೇರೆಯವರು ಪರೀಕ್ಷಾ ಕೇಂದ್ರಗಳ ಸುತ್ತ ಓಡಾಡಲು ಅವಕಾಶವಿಲ್ಲ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಅಕ್ರಮ ಕಂಡು ಬಂದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು. ಪ್ರತಿ ವರ್ಷದಂತೆ ಈ ಬಾರಿ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಯಬೇಕು. ಮೊದಲ ಹಂತದಲ್ಲಿಯೇ ಪರೀಕ್ಷಾ ನಿಯಮಗಳನ್ನು ಪಾಲಿಸಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಉಪ ನಿರ್ದೇಶಕ ಮಂಜುನಾಥ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಇಲಾಖೆಯಿಂದ ಎಲ್ಲಾ ರೀತಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಬಾರಿ 12942 ಹೊಸ ವಿದ್ಯಾರ್ಥಿಗಳು, 468 ಪುನರಾವರ್ತಿತ ವಿದ್ಯಾರ್ಥಿಗಳು, 459 ಖಾಸಗಿ ವಿದ್ಯಾರ್ಥಿಗಳು, 134 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಒಂದು ಎರಡು ವಿಷಯಗಳಲ್ಲಿ ಅನುತ್ತೀರ್ಣರಾದ 6 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 14014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಜರಿದ್ದರು. 16 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಶನಿವಾರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಸಭೆ ನಡೆಯಿತು.