ನಿಗದಿತ ಸಮಯದಲ್ಲಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಸೂಚನೆ

| Published : Sep 01 2024, 02:05 AM IST

ಸಾರಾಂಶ

ಪ್ರತಿ ಇಲಾಖೆ ಅಧಿಕಾರಿಗಳು ನಿಗದಿಪಡಿಸಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪ್ರತಿ ಇಲಾಖೆ ಅಧಿಕಾರಿಗಳು ನಿಗದಿಪಡಿಸಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಟಾನ ಪ್ರಗತಿ ಪರಿಶೀಲನೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಹಾಗೂ ಕುಟುಂಬಗಳಿಗೆ ಸರ್ಕಾರ ನಿಗದಿಪಡಿಸಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಅಲ್ಪಸಂಖ್ಯಾತರ ಹಾಸ್ಟೆಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಅವರಿಗೆ ವೃತ್ತಿ ಕೌಶಲ್ಯ ಶಿಕ್ಷಣ ನೀಡುವಂತಹ ಯೋಜನೆ ಕೈಗೊಳ್ಳಬೇಕು ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅರಿವು ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ವಿದ್ಯಾರ್ಥಿ ವೇತನ ನೀಡಲು ಕ್ರಮಕೈಗೊಳ್ಳಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳು ಜಿಲ್ಲೆಯ ಅನುಷ್ಟಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಹಾಗೂ ಗುಣಮಟ್ಟದಿಂದ ಕೂಡಿರಬೇಕು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ವಿವಿಧ ಸಮುದಾಯಗಳ ಮುಖಂಡರುಗಳ 38 ಸಭೆ ಮಾಡಿ ವಿವಿಧ ರೀತಿಯ 31 ಪ್ರಕರಣಗಳು ದಾಖಲಾಗಿದ್ದು, ವಿವಿಧ ಪ್ರಕರಣಗಳು ನ್ಯಾಯಾಲಯದಲ್ಲಿ ಇವೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಬಲರಾಂ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.