ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಹಾಗು ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಜನವರಿ 29ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ/ನೌಕರರು ಕೇಂದ್ರ ಸ್ಥಾನದಲ್ಲಿರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಸರಣಿ ಸಾರ್ವತ್ರಿಕ ರಜೆಗಳಿವೆಯೆಂದು ಕೇಂದ್ರಸ್ಥಾನ ಬಿಡುವಂತಿಲ್ಲ. ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಕ್ತಾಯವಾಗುವ ವರೆಗೂ ಎಲ್ಲ ಅಧಿಕಾರಿ, ನೌಕರರು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ತಪ್ಪಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ಸವಲತ್ತು ಪಡೆಯಲು ಆಗಮಿಸುವ ಫಲಾನುಭವಿಗಳನ್ನು ಸಂಬಂಧಿಸಿದ ಇಲಾಖೆಗಳೇ ಕರೆತರಬೇಕು. ನಿಯೋಜಿತ ನೋಡಲ್ ಅಧಿಕಾರಿಗಳು ಫಲಾನುಭವಿಗಳೊಂದಿಗೆ ಜನವರಿ 29ರಂದು ಬೆಳಿಗ್ಗೆ ೯ ಗಂಟೆಯೊಳಗಾಗಿ ಕಾರ್ಯಕ್ರಮ ನಡೆಯಲಿರುವ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಹಾಜರಿರಬೇಕು. ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರುವಾಗ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ವಿತರಿಸಲು 1 ಲಕ್ಷ ಮಜ್ಜಿಗೆ ಹಾಗೂ ನೀರಿನ ಪ್ಯಾಕೆಟ್‌ಗಳನ್ನು ಒದಗಿಸಲು ಕೆಎಂಎಫ್ ಅಧಿಕಾರಿಗೆ ಸೂಚಿಸಿದರು.ಫಲಾನುಭವಿಗಳ ಅನುಕೂಲಕ್ಕಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತಿಗಳಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ 405 ಕೆಎಸ್‌ಆರ್‌ಟಿಸಿ ಹಾಗೂ 220 ಖಾಸಗಿ ಸೇರಿದಂತೆ 625ಬಸ್ಸುಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರಲ್ಲದೆ ಫಲಾನುಭವಿಗಳನ್ನು ಕರೆತರಲು ನಿಯೋಜಿಸಲಿರುವ ಬಸ್ಸಿನ ಸಂಖ್ಯೆ, ಚಾಲಕರು ಹಾಗೂ ಅವರ ಮೊಬೈಲ್ ಸಂಖ್ಯೆಯ ಪಟ್ಟಿಯನ್ನು ಕೂಡಲೇ ಜಿಲ್ಲಾಡಳಿತಕ್ಕೆ ಒದಗಿಸಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿ ಬಸವರಾಜು ಅವರಿಗೆ ಹಾಗೂ ಖಾಸಗಿ ಬಸ್ಸುಗಳು ಪರವಾನಗಿ ಹೊಂದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು ಅವರಿಗೆ ಸೂಚನೆ ನೀಡಿದರು.
ಜಿಲ್ಲೆಯ ನಗರ ಸೇರಿದಂತೆ ಎಲ್ಲ ತಾಲೂಕುಗಳ ಪ್ರಮುಖ ಸ್ಥಳಗಳಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮದ ಬಗ್ಗೆ ಶಿಷ್ಟಾಚಾರದಂತೆ ಫ್ಲೆಕ್ಸ್, ಬ್ಯಾನರ್ ಅಳವಡಿಸಬೇಕು. ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಆಹ್ವಾನಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.ಫಲಾನುಭವಿಗಳಿಗೆ ವಿತರಿಸಲಾಗುವ ಸವಲತ್ತುಗಳನ್ನು ಕಾರ್ಯಕ್ರಮದ ಮುನ್ನಾದಿನವೇ ತಂದಿಟ್ಟುಕೊಳ್ಳಬೇಕು. ಯಾವುದೇ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಿಂದ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತೆ ಬಿ.ವಿ ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಸೇರಿದಂತೆ ಮತ್ತಿತರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.