ನಂಜನಗೂಡು ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

| Published : Jul 18 2024, 01:38 AM IST

ನಂಜನಗೂಡು ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಬಿನಿ ಜಲಾಶಯದಿಂದ ಬುಧವಾರ 45 ಸಾವಿರ ಕ್ಯುಸೆಕ್ ನೀರು ಹೊರ ಬಿಡುತ್ತಿರುವ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡು ಶ್ರೀನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದ ಸ್ನಾನಘಟ್ಟ, 16 ಕಾಲು ಮಂಟಪ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಸ್ಥಳಗಳ ಭೇಟಿ, ಪರಿಶೀಲನೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಕಬಿನಿ ಜಲಾಶಯದಿಂದ ಬುಧವಾರ 45 ಸಾವಿರ ಕ್ಯುಸೆಕ್ ನೀರು ಹೊರ ಬಿಡುತ್ತಿರುವ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡು ಶ್ರೀನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದ ಸ್ನಾನಘಟ್ಟ, 16 ಕಾಲು ಮಂಟಪ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.

ಪಟ್ಟಣದ ಹಳ್ಳದಕೇರಿ ಬಡಾವಣೆ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ಪಟ್ಟಣದ ಹಳ್ಳದಕೇರಿ ಬಡಾವಣೆಯಲ್ಲಿ ನಾಲ್ಕು ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಆಲಿಸಿದರು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಸೀಲ್ದಾರ್ ಅವರಿಗೆ ಸೂಚಿಸಿದರು.

ಇದೇ ವೇಳೆ ಜಿಲ್ಲಾಡಳಿತದ ವತಿಯಿಂದ ಕಾಳಜಿ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಪರಿಶೀಲಿಸಿದರು. ಇನ್ನು ನದಿ ನೀರಿನ ಮಟ್ಟ ಹೆಚ್ಚಾಗುವುದರಿಂದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.ಕಬಿನಿ, ನುಗು ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆ

ಮೈಸೂರು: ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಹಾಗೂ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಇದರಿಂದ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಸೂಚಿಸಿದ್ದಾರೆ.

ಬುಧವಾರ ಎಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ನಂತರ ಮಾತನಾಡಿದ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಸ್ಪಿ ಎನ್.ವಿಷ್ಣುವರ್ಧನ್, ಎಡಿಸಿ ಡಾ.ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಎಚ್.ಡಿ. ಕೋಟೆ ತಹಸೀಲ್ದಾರ್ ಶ್ರೀನಿವಾಸ್, ಸರಗೂರು ತಹಸೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಅಧಿಕಾರಿಗಳು ಇದ್ದರು.