ಫೆಬ್ರವರಿ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಾವೇಶ: ರೆಡ್ಡಿ ಶ್ರೀನಿವಾಸ

| Published : Jan 10 2025, 12:45 AM IST

ಫೆಬ್ರವರಿ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಾವೇಶ: ರೆಡ್ಡಿ ಶ್ರೀನಿವಾಸ
Share this Article
  • FB
  • TW
  • Linkdin
  • Email

ಸಾರಾಂಶ

ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು.

ಸಮಾವೇಶದ ಬಗ್ಗೆ ಚರ್ಚೆ, ಪ್ರಗತಿ ಪರಿಶೀಲನೆ ಸಭೆ ನಡೆಸಿದ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ

ಕನ್ನಡಪ್ರಭ ವಾರ್ತೆ ಕೊಪ್ಪಳ

ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ. ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಡಿ ಲಾಭ ಪಡೆದುಕೊಂಡ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಕರೆತರಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶಕ್ಕಾಗಿ ಫಲಾನುಭವಿಗಳನ್ನು ಸೇರಿಸಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು. ಈ ಹಿನ್ನೆಲೆ ತಾಲೂಕವಾರು ಸಭೆ ನಡೆಸಬೇಕು. ಸಮಿತಿಯ ಎಲ್ಲಾ ಸದಸ್ಯರು ಸಹಕಾರ ನೀಡಬೇಕು. ಇದರ ಜೊತೆಗೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಸೇರಿಸಲು ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನಪರವಾದ ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಇವುಗಳ ಲಾಭವನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶಕ್ಕಾಗಿ ಸುಮಾರು 1.50 ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಗೃಹ ಲಕ್ಷ್ಮಿ ಮತ್ತು ಶಕ್ತಿ ಯೋಜನೆಯ ಲಾಭ ಪಡೆದುಕೊಂಡಿರುವ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರಗಳ ತಲಾ 20 ಸಾವಿರ ಮತ್ತು ಕೊಪ್ಪಳ ಜಿಲ್ಲಾ ಕೇಂದ್ರದಿಂದ 25 ಸಾವಿರ ಫಲಾನುಭವಿಗಳನ್ನು ಸೇರಿಸಬೇಕು. ಅದೇ ರೀತಿ ಅನ್ನಭಾಗ್ಯ ಯೋಜನೆಯಡಿ ಜಿಲ್ಲಾ ಕೇಂದ್ರದಿಂದ 15 ಸಾವಿರ ಮತ್ತು ವಿವಿಧ ವಿಧಾನಸಭಾ ಕ್ಷೇತ್ರವಾರು 5 ಸಾವಿರದಂತೆ, ಯುವನಿಧಿ ಯೋಜನೆಯಡಿ ಜಿಲ್ಲೆಯ ಒಂದು ಸಾವಿರ ಹಾಗೂ ಗೃಹಜ್ಯೋತಿ ಯೋಜನೆಯಡಿ ಲಾಭಪಡೆದ ಜಿಲ್ಲೆಯ 10 ಸಾವಿರ ಫಲಾನುಭವಿಗಳನ್ನು ಕರೆತರಲು ಸಂಬಂಧಪಟ್ಟ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ ಅರಳಿ ಹಾಗೂ ಮಂಜುನಾಥ ಗೊಂಡಬಾಳ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ತಾಲೂಕಾ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.