ಅಮಿತ್ ಶಾ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

| Published : Dec 22 2024, 01:33 AM IST

ಸಾರಾಂಶ

ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಡಿಪಾರು ಮಾಡಬೇಕು ಹಾಗೂ ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ ಸಿ.ಟಿ.ರವಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು ಹಾಗೂ ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ ಸಿ.ಟಿ.ರವಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ನೇತೃತ್ವದಲ್ಲಿ ಸಮಾವೇಶಗೊಂಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಧರಣಿ ಮಾಡಿದರು. ಅಮಿತ್ ಶಾ, ನರೇಂದ್ರ ಮೋದಿ ಹಾಗೂ ಸಿ.ಟಿ. ರವಿ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ತೆರಳಿ ಜಿಲ್ಲಾಡಳಿತ ಭವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನ ಮುಂದೆ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಒಂದೇ ನಾಣ್ಯದ ಮುಖಗಳು. ಈ ಹಿಂದೆ ಗುಜರಾತ್‌ನಲ್ಲಿ ಗಡಿಪಾರು ಆಗಿದ್ದ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿರುವುದು ಖಂಡನೀಯ. ಈ ಕೂಡಲೇ ಕೇಂದ್ರ ಸರ್ಕಾರ ಅವರ ಸದಸ್ಯತ್ವವನ್ನು ವಜಾಗೊಳಿಸಿ, ಗಡಿಪಾರು ಮಾಡಬೇಕು. ಕೇವಲ ಅಧಿಕಾರಕ್ಕಾಗಿ ಬಿಜೆಪಿ ಇಂಥ ಹೇಳಿಕೆಯನ್ನು ನೀಡಿ, ಜನಾಂಗ ಹಾಗೂ ಧರ್ಮಗಳ ನಡುವೆ ದ್ವೇಷದ ಭಾವನೆಯನ್ನು ಬಿತ್ತುವ ಕೆಲಸವನ್ನು ಮಾಡುತ್ತಿದೆ. ಈ ಹಿಂದೆಯು ಸಹ ಅನೇಕ ಬಾರಿ ಸಂವಿಧಾನ ಹಾಗೂ ಅಂಬೇಡ್ಕರ್ ವಿರುದ್ಧವಾಗಿ ಬಿಜೆಪಿ ಮುಖಂಡರು ಮಾತನಾಡಿದ್ದಾರೆ. ರಾಷ್ಟ್ರಪತಿಗಳು ಮಧ್ಯೆ ಪ್ರವೇಶ ಮಾಡಿ, ಗೃಹ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು. ವಿಧಾನ ಪರಿಷತ್‌ನಲ್ಲಿ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಆಕ್ಷೇಪಣಾ ಹೇಳಿಕೆಯ ಹಿನ್ನೆಲೆಯಲ್ಲಿ ಅವರನ್ನು ಸಹ ಪರಿಷತ್‌ನಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಜಿಪಂ ಮಾಜಿ ಸದಸ್ಯ ಬಾಲರಾಜು ಮಾತನಾಡಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರವಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿ ಹೇಳಿಕೆಯನ್ನು ನೀಡಿರುವುದು ಸಹ ಆರ್‌ಎಸ್‌ಎಸ್ ಅಜೆಂಡಾವಾಗಿದೆ. ಇಂಥ ಪಕ್ಷಗಳಿಂದ ದೇಶ ಅಭಿವೃದ್ಧಿಯಾಗುವುದಿಲ್ಲ. ದೇಶದ ವಿಭಜನೆಯಾಗುತ್ತದೆ. ಅಮಿತ್ ಶಾ ರಾಜೀನಾಮೆ ನೀಡುವವರೆಗೆ ನಿರಂತರ ಹೋರಾಟ ನಡೆಯಲಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಿಕ್ಕಮಹದೇವ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ಅರಕಲವಾಡಿ ಗುರುಸ್ವಾಮಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಪ್ಜಲ್ ಷರೀಪ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಎಪಿಎಂಸಿ ಅಧ್ಯಕ್ಷ ಸೋಮೇಶ್, ಮಹದೇವಶೆಟ್ಟಿ, ಚುಡಾ ಸದಸ್ಯರಾದ ಎಸ್. ರಾಜು,ದ್ವಾರಕಿ, ಪುಟ್ಟಸ್ವಾಮಿ, ದೇಶವಳ್ಳಿ ನಟರಾಜು, ನಗರಸಭಾ ಸದಸ್ಯರಾದ ರಾಜಪ್ಪ, ಚಿನ್ನಮ್ಮ, ಜಯರಾಜ್, ಶ್ರೀಕಾಂತ್, ಶಿವಮೂರ್ತಿ, ಜಿ.ಎನ್. ಲೋಕೇಶ್,ಮಹೇಶ್‌ಕುದರ್, ಅಹಿಂದ ಘಟಕದ ಜಿಲ್ಲಾಧ್ಯಕ್ಷ ಹಳೇಪುರ ಮಹೇಶ್, ಅದಿವಾಸಿ ಸಂಘಟನೆಯ ರತ್ನಮ್ಮ, ನಾಗು ಮೋಹನ್, ಮೊದಲಾದವರು ಇದ್ದರು.