26ರಿಂದ ಜಿಲ್ಲಾಧ್ಯಂತ ಸಂವಿಧಾನ ಜಾಗೃತಿ ಜಾಥಾ: ಸಚಿವ ಆರ್‌.ಬಿ.ತಿಮ್ಮಾಪುರ

| Published : Jan 27 2024, 01:17 AM IST

26ರಿಂದ ಜಿಲ್ಲಾಧ್ಯಂತ ಸಂವಿಧಾನ ಜಾಗೃತಿ ಜಾಥಾ: ಸಚಿವ ಆರ್‌.ಬಿ.ತಿಮ್ಮಾಪುರ
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿದರು. ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಬೆಳ್ಳಿ ಪದಕ ನೀಡಿ ಗೌರವಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಮಾಹಿತಿ ಕುರಿತಾದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚರಣೆ ಅಂಗವಾಗಿ ಸಂವಿಧಾನ ಮಹತ್ವ ಹಾಗೂ ರಾಷ್ಟ್ರೀಯ ಏಕತೆ ಎತ್ತಿ ಹಿಡಿಯುವ ಉದ್ದೇಶದಿಂದ ಜಿಲ್ಲಾದ್ಯಂತ ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಎರಡು ಸ್ತಬ್ಧ ಚಿತ್ರಗಳನ್ನು ಸಜ್ಜುಗೊಳಿಸಿದ್ದು, ಬಾಗಲಕೋಟೆ ಮತ್ತು ಜಮಖಂಡಿ ಉಪವಿಭಾಗಗಳ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸಂಚರಿಸಲಿವೆ. ಈ ಜಾಗೃತಿ ಜಾಥಾ ಫೆಬ್ರವರಿ 22ರವರೆಗೆ ನಡೆಯಲಿದ್ದು, ನಂತರ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಏಕತೆ ಸಮಾವೇಶದಲ್ಲಿ ಜಿಲ್ಲೆಯ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ರಾಜ್ಯ ಸರ್ಕಾರತನ್ನ ಆರ್ಥಿಕ ಸಾಮರ್ಥ್ಯ ಮತ್ತು ಅಭಿವೃದ್ಧಿಯ ಪರಿಮಿತಿಯಲ್ಲಿ ಉದ್ಯೋಗ, ಶಿಕ್ಷಣ ಹಾಗೂ ನಿರುದ್ಯೋಗ ವೇತನ, ವೃದ್ಧಾಪ್ಯ, ಅನಾರೋಗ್ಯ ಮತ್ತು ಅಸಮರ್ಥತೆಯ ಸಂದರ್ಭಗಳಲ್ಲಿ ಸಹಾಯ ನೀಡಲು ಪರಿಣಾಮಕಾರಿ ಅವಕಾಶ ಕಲ್ಪಿಸಿದ್ದಲ್ಲದೆ ಇನ್ನಿತರ ಅರ್ಹ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಂ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇವುಗಳಲ್ಲಿ ಕೊನೆಯದಾದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 5400 ಜನ ನೋಂದಣಿ ಮಾಡಿಕೊಂಡಿದ್ದು, ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಲಿದ್ದಾರೆಂದು ತಿಳಿಸಿದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಹಾನಿ ವೀಕ್ಷಿಸಲಾಗಿದೆ. ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ 1.62 ಲಕ್ಷ ಹೆಕ್ಟೇರ್ ಕ್ಷೇತ್ರದ ವಿವಿಧ ಬೆಳೆಗಳಿಗೆ 1,62,719 ರೈತರಿಗೆ ಪ್ರಾಥಮಿಕ ಹಂತದಲ್ಲಿ ₹ 32.26 ಕೋಟಿ ಪರಿಹಾರ ಜಮಾ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 3.88 ಲಕ್ಷ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿದ್ದಾರೆ. 4,07,161 ಜನ ಗೃಹಜ್ಯೋತಿ ಯೋಜನೆಯಡಿ ಹೆಸರು ನೋಂದಾಯಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿಯ ಬದಲಾಗಿ ಜುಲೈನಿಂದ ಇಲ್ಲಿಯವರೆಗೆ ಪ್ರತಿ ಫಲಾನುಭವಿಗಳಿಗೆ ತಿಂಗಳಿಗೆ ₹ 170 3,58,586 ಪಡಿತರ ಚೀಟಿ ಫಲಾನುಭವಿಗಳಿಗೆ ಜಮಾ ಮಾಡಿ ಶೇ.92.75 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇ ಒ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ಅಮರೇಶ ಪಮ್ಮಾರ ಇತರರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ: ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕೀರ್ತಿ ನಾಯಕ, ತರುಣ ನಾಯಕ, ನಂದಾ ಚಿಚಖಂಡಿ, ಮಲ್ಲೇಶ ಬಡಿಗೇರ (ಸೈಕ್ಲಿಂಗ್), ಸೋನಿಯಾ ಜಾಧವ, ಐಶ್ವರ್ಯ ಕರಿಗಾರ, ಗೋಪವ್ವಾ ಖೋಡ್ಡಿ, ಈಶ್ವರ ಡಂಗಿ (ಕುಸ್ತಿ), ಸಹನಾ ಕೊಣ್ಣೂರ (ಬಾಲ ವಿಜ್ಞಾನಿ), ಪೂರ್ವ ಅಂಗಡಿ (ಹ್ಯಾಂಡ್ ಬಾಲ್‌ ಮತ್ತು ಡ್ಯಾಚ್‌ ಬಾಲ್‌), ರಾಮನಗೌಡ ಪಾಟೀಲ, ತಿಪ್ಪಣ್ಣ ಗೌಡರ, ಮುತ್ತಪ್ಪ ಕಂಕಣವಾಡಿ (ಕೃಷಿ), ಮಹಾಂತೇಶ, ವಿರೇಶ ನಾಲತ್ವಾಡ (ಪತ್ರಿಕೋದ್ಯಮ) ಅವರನ್ನು ಸನ್ಮಾನಿಸಲಾಯಿತು.

ಚಾಲಕ ಕಂ ನಿವರ್ವಾಹಕರಿಗೆ ಬೆಳ್ಳಿ ಪದಕ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಗಲಕೋಟೆ ವಿಭಾಗದಲ್ಲಿ 5 ವರ್ಷಗಳವರೆಗೆ ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಎಂಬ ಗೌರವದೊಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.

ಗ್ಯಾರಂಟಿ ಯೋಜನೆಗಳ ಸ್ತಬ್ಧ ಚಿತ್ರಗಳ ಪ್ರದರ್ಶನ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಮಾಹಿತಿ ಕುರಿತಾದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.