ಮಳೆ ಕೊರತೆಯಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಡೀ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ.

ಧಾರವಾಡ:

ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಎದ್ದು ಕಾಣುತ್ತಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ದಕ್ಷಿಣ ಕರ್ನಾಟಕ ಮಾತ್ರ ಕಾಣುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿನ ವಾಸ್ತವ ಪರಿಸ್ಥಿತಿ ಪರಿಶೀಲಿಸದೆ ಬರಪೀಡಿತ ತಾಲೂಕುಗಳ ಘೋಷಣೆ ಮಾಡಿರುವುದು ಉತ್ತರ ಕರ್ನಾಟಕಕ್ಕೆ ಮಾಡಿದ ಅನ್ಯಾಯ ಎಂದು ಜೆಡಿಎಸ್‌ ಮುಖಂಡ ಗುರುರಾಜ ಹುಣಸಿಮರದ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಡೀ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರ ಘೋಷಿಸಿರುವ 101 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಜಿಲ್ಲೆಯ ಯಾವುದೇ ತಾಲೂಕನ್ನು ಸೇರಿಸಿಲ್ಲ. ಕೂಡಲೇ ಧಾರವಾಡ ಜಿಲ್ಲೆಯನ್ನೂ ಬರಪೀಡಿತ ಎಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಶೇ. 85ರಷ್ಟು ಬೆಳೆಗಳು ಒಣಗಿ ಹೋಗಿವೆ. ಮಳೆಯ ಅಭಾವದಿಂದ ಕೃಷಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಹಿಂಗಾರು ಬೆಳೆಗಳಿಗೂ ಮಳೆಯ ಕೊರತೆ ಎದುರಾಗಿದ್ದು, ರೈತರ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ಇಂತಹ ಸಂದರ್ಭದಲ್ಲಿ ಬರ ಪರಿಹಾರ ನೀಡದೆ ಜಿಲ್ಲೆಯನ್ನು ಬರದ ಪಟ್ಟಿಯಿಂದ ಹೊರಗಿಟ್ಟಿರುವುದು ಅತ್ಯಂತ ಖಂಡನೀಯ ಎಂದರು.

ರಾಜ್ಯ ಸರ್ಕಾರ ಇನ್ನಾದರೂ ಜಿಲ್ಲೆಯ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ, ಜಿಲ್ಲೆಯನ್ನು ಕೂಡಲೇ ಬರಪೀಡಿತ ಎಂದು ಘೋಷಿಸಬೇಕು. ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಅಗತ್ಯ ನೆರವು ಒದಗಿಸಬೇಕು. ಸ್ಥಳೀಯ ಸಚಿವರು ಹಾಗೂ ಶಾಸಕರು ಪಕ್ಷಾತೀತವಾಗಿ ಸರ್ಕಾರದ ಮೇಲೆ ಒತ್ತಡ ತಂದು ಧಾರವಾಡವನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿಸಬೇಕು. ಇಲ್ಲವಾದಲ್ಲಿ ರೈತರ ಪರವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಶರಣಪ್ಪ ತಲ್ಲೂರ, ವಸಂತ ಬಿಳೆಲಿ ಸೇರಿದಂತೆ ಇತರರು ಇದ್ದರು.