ಸಾರಾಂಶ
ಉಡುಪಿ ಜಿಲ್ಲೆಯಲ್ಲಿ ೩೦ ಸಾವಿರ ಮಂದಿಗೆ ತಲುಪದ ಗೃಹಲಕ್ಷ್ಮೀ
ಕನ್ನಡಪ್ರಭ ವಾರ್ತೆ ಉಡುಪಿ
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 30 ಸಾವಿರಕ್ಕೂ ಅಧಿಕ ಫಲಾನಿಭವಿಗಳಿಗೆ ತಲಾ 2 ಸಾವಿರ ರು. ತಲುಪಿಲ್ಲ. ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ಈ ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಹೇಳಿದರು.ಅವರು ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯಡಿ ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ೨,೧೩,೬೫೮ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ೧,೭೭,೯೧೦ ಫಲಾನುಭವಿಗಳಿಗೆ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಿ, ಶೇ. ೮೫ ರಷ್ಟು ಗುರಿ ಸಾಧಿಸಲಾಗಿರುತ್ತದೆ ಎಂದರು.ಜಿಲ್ಲಾಡಳಿತಕ್ಕೆ ಎಚ್ಚರಿಕೆ: ಜಿಲ್ಲೆಯ ಪ್ರವಾಸೋದ್ಯಮ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ೨೦೧೬-೧೭. ೨೦೧೮-೧೯ ನೇ ಸಾಲಿನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದರೂ ಅವುಗಳ ಅನುಷ್ಠಾನ ಈವರೆಗೆ ಆಗಿರುವುದಿಲ್ಲ. ಈ ರೀತಿ ಆದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಹೊಸ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.