ಶಾಲಾ- ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

| Published : Oct 29 2024, 12:50 AM IST

ಸಾರಾಂಶ

ಚಿಕ್ಕಮಗಳೂರು, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ದುರಸ್ತಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕಮಗಳೂರಿನ ಜಿಲ್ಲಾ ಪಂಚಾಯ್ತಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ದುರಸ್ತಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸೋಮವಾರ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆಯಿಂದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡಗಳು ಹಾಗೂ ಮೇಲ್ಛಾವಣಿಗಳು ಶಿಥಿಲಗೊಂಡು ವಿದ್ಯಾರ್ಥಿಗಳ ಕಲಿಕೆಗೆ ಅಡಚಣೆಯಾಗುವಂತಿದ್ದರೆ ಅಂತಹ ಶಾಲಾ ಕಟ್ಟಡಗಳನ್ನು ಗುರುತಿಸಿ ಶೀಘ್ರವಾಗಿ ಕೊಠಡಿಗಳ ದುರಸ್ತಿಗೊಳಿಸಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸಿ ಕೊಡಬೇಕು ಎಂದರು.ಜಿಲ್ಲಾ ಪಂಚಾಯಿತಿ ಹಾಗೂ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿ ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಆದರೆ, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕೆರೆಗಳ ಒತ್ತುವರಿ ತೆರವು ಕಾರ್ಯ ಪೂರ್ಣಗೊಂಡಿರುವುದಿಲ್ಲ. ಕೂಡಲೇ ಕೆರೆಗಳ ಮತ್ತು ಕಾಲುವೆಗಳ ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಿ ಕೆರೆ ಗಡಿ ಭಾಗದಲ್ಲಿ ಕಾಲುವೆ ನಿರ್ಮಿಸಿ ಬಯೋಫೆನ್ಸಿಂಗ್ ಆಳವಡಿಸಿ ಕೆರೆಗಳ ಸಂರಕ್ಷಣೆಗೆ ಕ್ರಮವಹಿಸಬೇಕು ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 1387 ಸರ್ಕಾರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಶಾಲಾ ಕಟ್ಟಡಗಳ ಸುರಕ್ಷತೆ ಮತ್ತು ಅಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ ದುರಸ್ತಿ ಅಗತ್ಯವಿರುವ ಕಟ್ಟಡಗಳು ಹಾಗೂ ಮೇಲ್ಛಾವಣಿಗಳನ್ನು ದುರಸ್ತಿಗೊಳಿಸಲು ಕ್ರಮವಹಿಸಲಾಗಿದೆ. ಬೋಧನೆಗೆ ಸುಸ್ಥಿತಿಯಲ್ಲಿರುವ ಕೊಠಡಿಗಳನ್ನು ಮಾತ್ರ ಬಳಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ ಜಿಲ್ಲೆಯಲ್ಲಿ 1729 ಕೆರೆಗಳಿದ್ದು, 761 ಕೆರೆಗಳ ಒತ್ತುವರಿ ಗುರುತಿಸಲಾಗಿದೆ. ಇವುಗಳಲ್ಲಿ 259 ಕೆರೆಗಳನ್ನು ಒತ್ತುವರಿಯಿಂದ ತೆರವುಗೊಳಿಸಿ ಕೆರೆಯ ಸುತ್ತ ಬಯೋ ಫೆನ್ಸಿಂಗ್ ಆಳವಡಿಸಿ ಸಂರಕ್ಷಿಸ ಲಾಗುತ್ತಿದೆ. ಬಾಕಿ ಇರುವ 502 ಕೆರೆಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು. ಈ ಬಾರಿ ಮಳೆಯಿಂದ ಹಾನಿ ಯಾಗಿರುವ 26 ರಸ್ತೆ ಕಾಮಗಾರಿಗಳಲ್ಲಿ ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಮತ್ತು ಸೇತುವೆ ದುರಸ್ತಿ ಕಾಮಗಾರಿ ಯನ್ನು ನಿರ್ವಹಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತರೀಕೆರೆ ಉಪ ವಿಭಾಗಾಧಿಕಾರಿ ಡಾ. ಕಾಂತ ರಾಜ್ ಹಾಗೂ ಜಿಪಂ ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.28 ಕೆಸಿಕೆಎಂ 4ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ನಡೆಯಿತು. ಡಿಸಿ ಮೀನಾ ನಾಗರಾಜ್‌, ಜಿಪಂ ಸಿಇಓ ಎಚ್‌.ಎಸ್‌. ಕೀರ್ತನಾ ಇದ್ದರು.