ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ

| Published : Dec 17 2023, 01:45 AM IST

ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

ಕನ್ನಡಪ್ರಭ ವಾರ್ತೆ ಮಂಗಳೂರು

ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿಯಮ ಉಲ್ಲಂಘಿಸಿ ವಾಣಿಜ್ಯ ಸಂಕೀರ್ಣ ಹಾಗೂ ವಸತಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಬರುತ್ತಿವೆ. ಕಟ್ಟಡ ಅಡಿಪಾಯ ಹಂತದಲ್ಲಿರುವಾಗಲೇ ಇಂತಹ ಉಲ್ಲಂಘನೆಗಳ ಬಗ್ಗೆ ಕ್ರಮ ಕೈಗೊಂಡು, ತಕ್ಷಣವೇ ಕಾಮಗಾರಿ ನಿಲ್ಲಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್ ನೆರವು ಪಡೆಯುವಂತೆ ಲೋಕಾಯುಕ್ತ ನ್ಯಾಯಮೂರ್ತಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡಬೇಕು. ಸಾಂಕ್ರಾಮಿಕ ರೋಗಗಳಿಗೆ ಸ್ವಚ್ಛತೆಯ ಕೊರತೆಯೇ ಮೂಲ ಕಾರಣ. ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಕೆರೆಗಳು ನೀರಿನ ಅತ್ಯುನ್ನತ ಮೂಲವಾಗಿದ್ದು, ಇವುಗಳನ್ನು ಸಂರಕ್ಷಿಸಲು ಆದ್ಯತೆ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 636 ಕೆರೆಗಳು ಇದ್ದು, ಇವುಗಳನ್ನು ಅಳತೆ ಮಾಡಿ ದಾಖಲೆಗಳನ್ನು ನಿರ್ವಹಿಸಿರುವುದು ಶ್ಲಾಘನೀಯ ಎಂದು ನ್ಯಾಯಮೂರ್ತಿ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರೆಯುವಂತಾಗಬೇಕು. ಲಭ್ಯವಿರುವ ವೈದ್ಯರು ಸಿಬ್ಬಂದಿ ಹಾಗೂ ಮೂಲಸೌಕರ್ಯಗಳನ್ನು ಬಳಸಿಕೊಂಡು ಉತ್ತಮ ಸೇವೆ ನೀಡುವಂತೆ ಅವರು ಆರೋಗ್ಯ ಇಲಾಖೆಗೆ ಸೂಚಿಸಿದರು.

ತಾಲೂಕು ಕಚೇರಿಗಳಲ್ಲಿ ಸಿಬ್ಬಂದಿಗೆ ಸರಿಯಾಗಿ ಕರ್ತವ್ಯ ಹಂಚಿಕೆ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಗೌರವದಿಂದ ವರ್ತಿಸುವಂತಹ ವಾತಾವರಣ ಇರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್.ಕೆ, ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಶ್ಯಂತ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸೈಮನ್ ಮತ್ತಿತರರು ಇದ್ದರು.

ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್ ಸ್ವಾಗತಿಸಿದರು. ಮಹಾನಗರ ಪಾಲಿಕೆ ಆಯುಕ್ತ ಆನಂದ್ ವಂದಿಸಿದರು.