ಶ್ರೀಶಂಭುಲಿಂಗೇಶ್ವರ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಪದವಿ ಕಾಲೇಜುಗಳ ಕ್ರೀಡಾಕೂಟದಲ್ಲಿ ಜಿಲ್ಲೆ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಂದ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಜಯಂತಿ ನಗರದ ಶ್ರೀಶಂಭುಲಿಂಗೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಅ.29 ಮತ್ತು 30ರಂದು ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಣ ಸಂಸ್ಥೆ ಮ್ಯಾನೆಜಿಂಗ್ ಟ್ರಸ್ಟಿ ಪ್ರೊ.ಎಂ.ಪಂಚಲಿಂಗೇಗೌಡ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಡ್ಯ ಹಾಗೂ ಶ್ರೀಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಕ್ರೀಡಾಕೂಟದ ಉಪಸ್ಥಿತಿಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಹಿಸಲಿದ್ದಾರೆ. ಕ್ರೀಡಾಜ್ಯೋತಿಯನ್ನು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಗೌರವ ಉಪಸ್ಥಿತಿ ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಡಾ.ಮೂರ್ತಿ ವಹಿಸಲಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಖೋ-ಖೋ ತರಬೇತುದಾರ ಕೆ.ಮಂಜುನಾಥ್ ಕುರುಬೂರು ಅವರು ಸಮಾರಂಭ ಉದ್ಘಾಟಿಸಲಿದ್ದಾರೆ ಎಂದರು.ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳಿಂದ 2500-3000 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ., ಬರುವ ಕ್ರೀಡಾಪಟುಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಪಾಂಡವಪುರ ಪಟ್ಟಣದಿಂದ, ರೈಲ್ವೇ ನಿಲ್ದಾಣ ಹಾಗೂ ಎಲೆಕೆರೆ ಹ್ಯಾಂಡ್ಪೋಸ್ಟ್ನಿಂದ ಸಾರಿಗೆ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ ಎಂದರು.
ಪ್ರಾಂಶುಪಾಲ ರಾಮಕೃಷ್ಣೇಗೌಡ ಮಾತನಾಡಿ, ಕಾಲೇಜು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಪದವಿ ಕಾಲೇಜುಗಳ ಕ್ರೀಡಾಕೂಟದಲ್ಲಿ ಜಿಲ್ಲೆ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಂದ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಯೋಜಕ ಎಸ್.ಎಂ.ಗುರುಸ್ವಾಮಿ, ಸಂಸ್ಥೆ ಕಾರ್ಯದರ್ಶಿ ಪಿ.ಅಕ್ಷಯ್, ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಜರಿದರು.