, 2027ರ ಜನವರಿ 10ರಿಂದ 12ರವರೆಗೆ ನವದೆಹಲಿಯಲ್ಲಿ ರಾಷ್ಟ್ರಮಟ್ಟದ ಯುವಜನೋತ್ಸವ ಆಯೋಜನೆಯಾಗಿದೆ. ಈ ಸಂಬಂಧ ಜಿಲ್ಲಾಮಟ್ಟದ ಯುವಜನೋತ್ಸವವನ್ನು ನ. 24ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಮಟ್ಟದ ವಿಜೇತರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕಳುಹಿಸಬೇಕಾಗಿದ್ದು, ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭವಾರ್ತೆ ಚಾಮರಾಜನಗರ

ಇದೇ ತಿಂಗಳ 24ರಂದು ನಗರದಲ್ಲಿ ಜಿಲ್ಲಾಮಟ್ಟದ ಯುಜನೋತ್ಸವ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಾಲ್ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯ ಆರಂಭದಲ್ಲಿ ಯುವಜನೋತ್ಸವ ಕಾರ್ಯಕ್ರಮದ ಯಶಸ್ವಿ ನಿರ್ವಹಣೆ ಹಾಗೂ ಆಯೋಜನೆಗಾಗಿ ಜಿಲ್ಲಾ ಸಿಇಒ ಅವರು ಸಲಹೆ, ಅಭಿಪ್ರಾಯಗಳನ್ನು ಆಲಿಸಿದರು. ಯುವಜನೋತ್ಸವದಲ್ಲಿ ನಡೆಯುವ ಸಾಂಸ್ಕೃತಿಕ ಸ್ಪರ್ಧೆಗಳು ಮುಂದಿನ ಪೀಳಿಗೆಯ ಯುವಜನರ ಕಲಾಪ್ರತಿಭೆಗೆ ವೇದಿಕೆಯಾಗಲಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗುವ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ನಿಷ್ಪಕ್ಷಪಾತ ಹಾಗೂ ಸಮರ್ಥ ತೀರ್ಪುಗಾರರನ್ನು ನಿಯೋಜಿಸಬೇಕು. ಹೆಚ್ಚಿನ ತಂಡಗಳು ಭಾಗವಹಿಸುವುದರಿಂದ ತಂಡಗಳ ಪ್ರದರ್ಶನ ವೀಕ್ಷಿಸಿ ತೀರ್ಪು ನೀಡಲು ಹೆಚ್ಚುವರಿ ತೀರ್ಪುಗಾರರ ಅಗತ್ಯವಿದೆ. ಕಾರ್ಯಕ್ರಮದಲ್ಲಿ ಮೂಲಸೌಲಭ್ಯಗಳು ಇರಬೇಕು ಎಂದು ತಿಳಿಸಿದರು.

ಕವನ ರಚನೆ ಸ್ಪರ್ಧೆಯಲ್ಲಿ ಕಳೆದ ಬಾರಿಯ ತಪ್ಪುಗಳು ಮರುಕಳಿಸದೇ ಅವಶ್ಯ ಪೂರ್ವತಯಾರಿ ಮಾಡಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ಭಾಗವಹಿಸಿ ವಿಜೇತರಾಗುವ ಕಲಾವಿದರಿಗೆ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ ದಿನಭತ್ಯೆ ಹಾಗೂ ಪ್ರಯಾಣಭತ್ಯೆ ನೀಡಬೇಕು. ಯುವಜನೋತ್ಸವದಲ್ಲಿ ವಿದ್ಯಾರ್ಥಿಗಳಲ್ಲದೆ ಸಾರ್ವಜನಿಕರು ಭಾಗವಹಿಸುವಂತೆ ಪ್ರೇರೇಪಿಸಲು ಸೋಶಿಯಲ್ ಮೀಡಿಯಾ ಮೂಲಕ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ತಲುಪಿಸಬೇಕು ಎಂಬುದೂ ಸೇರಿದಂತೆ ಹಲವು ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾದವು.

ಸಭೆಯಲ್ಲಿ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಆಕೃತಿ ಬನ್ಸಾಲ್ ಅವರು ಮಾತನಾಡಿ 2027ರ ಜನವರಿ 10ರಿಂದ 12ರವರೆಗೆ ನವದೆಹಲಿಯಲ್ಲಿ ರಾಷ್ಟ್ರಮಟ್ಟದ ಯುವಜನೋತ್ಸವ ಆಯೋಜನೆಯಾಗಿದೆ. ಈ ಸಂಬಂಧ ಜಿಲ್ಲಾಮಟ್ಟದ ಯುವಜನೋತ್ಸವವನ್ನು ನ. 24ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಮಟ್ಟದ ವಿಜೇತರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕಳುಹಿಸಬೇಕಾಗಿದ್ದು, ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಷ್ಟಾಚಾರ ಪ್ರಕಾರವೇ ಕಾರ್ಯಕ್ರಮ ನಡೆಸಲಾಗುವುದು. 15ರಿಂದ 29ರ ವಯೋಮಾನದವರಿಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ಅನುಭವಿ ತೀರ್ಪುಗಾರರನ್ನು ನಿಯೋಜಿಸಬೇಕು. ಸಭಾಂಗಣದ ಸ್ವಚ್ಛತೆ, ಕಾರ್ಯಕ್ರಮದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯಗಳನ್ನು ನಗರಸಭೆಯಿಂದ ಒದಗಿಸಬೇಕು. ಆರೋಗ್ಯ ಇಲಾಖೆಯಿಂದ ಸ್ಪರ್ಧಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆಯಾಗಬೇಕು. ಒಟ್ಟಾರೆ ಎಲ್ಲಾ ಅವಶ್ಯ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ ಅವರು ಮಾತನಾಡಿ, ಜಿಲ್ಲೆಯ ಯುವಜನರ ಕಲಾಪ್ರತಿಭೆಗೆ ಪೂರಕವಾಗಿರುವ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಜನಪದ ಗೀತೆ, ಚಿತ್ರಕಲೆ, ನಶಾಮುಕ್ತ ಯುವಭಾರತ ಕುರಿತ ನುಕ್ಕಾಡ್ ನಾಟಕ ಹಾಗೂ ಕನ್ನಡ, ಹಿಂದಿ ಮತ್ತು ಆಂಗ್ಲಭಾಷೆಯಲ್ಲಿ ಕವಿತೆ ಬರೆಯುವ ಸ್ಪರ್ಧೆಗಳು ನಡೆಯಲಿವೆ. ಈ ಎಲ್ಲಾ ಸಾಂಸ್ಕೃತಿಕ ಸ್ಪರ್ಧೆಗಳಿಗೂ ಭಾಗವಹಿಸುವವರ ಸಂಖ್ಯೆ ಹಾಗೂ ಸ್ಪರ್ಧೆಯ ಸಮಯವನ್ನು ನಿಗದಿಗೊಳಿಸಲಾಗಿದೆ ಎಂದರು.

ಡಿ.ವೈ.ಎಸ್.ಪಿ ಸ್ನೇಹರಾಜ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಎನ್. ನೀಲಾದೇವಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗಿರೀಶ್, ಚಾಮರಾಜನಗರ ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶಾಂತರಾಜು, ಸರ್ಕಾರಿ ಮಹಿಳಾ ಕಾಲೇಜಿನ ಎನ್.ಎಸ್.ಎಸ್ ಸಂಯೋಜಕರಾದ ಡಾ. ಮಹೇಶ್, ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷರಾದ ಜಿ. ಬಂಗಾರು, ಜನಪದ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ, ಕಲಾವಿದರಾದ ಕಿರಣ್ ಗಿರ್ಗಿ, ಹೊಸೂರು ಶಿವಣ್ಣ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.