ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆ ಪರಿಚಯಿಸುವ ಉದ್ದೇಶದಿಂದ ಸೆ.15ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆ ಪರಿಚಯಿಸುವ ಉದ್ದೇಶದಿಂದ ಸೆ.15ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ತಿಳಿಸಿದರು.ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ಯುವಕರಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಬಾರಿ ಮಾನವ ಸರಪಳಿ ಹಾಗೂ ಬೈಕ್ ರ‍್ಯಾಲಿಗಳ ಬದಲಾಗಿ ಯುವ ಸಂಸತ್ತು ಕಾರ್ಯಕ್ರಮಕ್ಕೆ ಆದ್ಯತೆ ನೀಡಲಾಗಿದೆ. ಸೆ.15ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.
ಸೆ.16ರಿಂದ ನ. 26ರ ವರೆಗೆ ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಮುಂದುವರಿಯಲಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಕ್ಟೋಬರ್ 10ರೊಳಗೆ ಯುವ ಸಂಸತ್ತು ಆಯೋಜಿಸಲು, ಸೆ.15ರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಪ್ರಜಾಪ್ರಭುತ್ವದ ಮಹತ್ವ ಸಾರುವ ಉಪನ್ಯಾಸ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಕರ್ನಾಟಕ ವಿಧಾನಸಭೆಯ ಮಾದರಿಯಲ್ಲಿ ಯುವ ಸಂಸತ್ ರಚಿಸಲಾಗುತ್ತಿದ್ದು, ವಿದ್ಯಾರ್ಥಿಗಳು ವಿಧಾನಸಭೆಯ ಕಲಾಪದ ಮಾದರಿಯಲ್ಲಿ ಭಾಗವಹಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿಷಯ ತಜ್ಞರು ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರ ಸಂಕಿರಣ ಹಾಗೂ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ವಿದ್ಯಾರ್ಥಿಗಳ ಆಯ್ಕೆ, ತರಬೇತಿ, ಪೂರ್ವಾಭ್ಯಾಸ ಹಾಗೂ ಯುವ ಸಂಸತ್ತಿನ ಕಲಾಪಗಳನ್ನು ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ವೀಡಿಯೊ ಸಂವಾದ ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ವಿಜಯಕುಮಾರ ಆಜೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.