ಕಾರಟಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ಡಾ. ರವೀಂದ್ರನಾಥ ಮೇಟಿ ಬುಧವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯವೈಖರಿ ಪರಿಶೀಲಿಸಿದರು. ಲೋಪ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕಾರಟಗಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ಡಾ. ರವೀಂದ್ರನಾಥ ಮೇಟಿ ಬುಧವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯವೈಖರಿ ಪರಿಶೀಲಿಸಿದರು. ಲೋಪ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಸಾರ್ವಜನಿಕರು ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಂದ ಆಸ್ಪತ್ರೆಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಅವರು, ವೈದ್ಯರು ಸೇರಿದಂತೆ ಎಲ್ಲ ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆಸ್ಪತ್ರೆಯ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ ಅವರು, ಸರ್ಕಾರದ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಅಗತ್ಯ ಔಷಧಗಳನ್ನು ಖರೀದಿಸಬೇಕು. ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಅರಿವಳಿಕೆ ತಜ್ಞರ ನೇಮಕಕ್ಕೆ ಕ್ರಮ: ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಕುರಿತು ಮಾತನಾಡಿದ ಅವರು, ಬಹುತೇಕ ಹುದ್ದೆಗಳು ಭರ್ತಿಯಾಗಿವೆ. ಆದರೆ ಅರಿವಳಿಕೆ (ಅನಸ್ತೇಷಿಯಾ) ತಜ್ಞ ವೈದ್ಯರ ಕೊರತೆ ಇರುವುದರಿಂದ ಶಸ್ತ್ರಚಿಕಿತ್ಸೆ ಸ್ಥಗಿತಗೊಂಡಿದೆ. ಶೀಘ್ರದಲ್ಲೇ ಅರಿವಳಿಕೆ ತಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಾರ್ವಜನಿಕರಿಂದ ಬಂದಿರುವ ದೂರುಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ವೈದ್ಯರು ಹಾಗೂ ಸಿಬ್ಬಂದಿ ವಿಭಾಗವಾರು ಜವಾಬ್ದಾರಿ ವಹಿಸಿಕೊಂಡು ಆಸ್ಪತ್ರೆಯ ಸ್ವಚ್ಛತೆ, ಔಷಧಗಳ ಲಭ್ಯತೆ ಹಾಗೂ ರೋಗಿಗಳ ಸೇವೆಗೆ ಆದ್ಯತೆ ನೀಡಬೇಕು ಎಂದರು. ಯಾವುದೇ ಲೋಪ ಕಂಡುಬಂದರೆ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.

ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ: ಕಾರಟಗಿ ಭಾಗದಲ್ಲಿ ಬೇಸಿಗೆ ಅವಧಿಯಲ್ಲಿ ವಾಂತಿ-ಭೇದಿ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯ ಔಷಧಗಳ ದಾಸ್ತಾನು ಹಾಗೂ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಆ್ಯಂಬುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಉತ್ತಮ ಸೇವೆ ಒದಗಿಸಬೇಕು ಎಂದು ಸೂಚಿಸಿದರು.

ಆಸ್ಪತ್ರೆಯ ಕಾರ್ಯವೈಖರಿ ಕುರಿತು ಆರೋಗ್ಯ ಸಚಿವರು ಸೇರಿದಂತೆ ಮೇಲಧಿಕಾರಿಗಳಿಗೆ ವ್ಯಾಪಕ ದೂರುಗಳು ಬಂದಿವೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಲೋಪಗಳನ್ನು ಸರಿಪಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಜಾಗ ಖಾಲಿ ಮಾಡಬೇಕಾಗುತ್ತದೆ ಎಂದು ಡಾ. ಮೇಟಿ ಖಡಕ್ ಎಚ್ಚರಿಕೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಬಶೀರಾ ಲಡ್ಕನ್, ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಸ್ಥಾಯಿ ಸಮಿತಿ ಅಧ್ಯಕ್ಷ ಬೂದಿ ದೊಡ್ಡ ಬಸವರಾಜ, ಡಾ. ಆನಂದ ದಿವಟರ್, ಡಾ. ರಾಮಣ್ಣ, ನ್ಯಾಯವಾದಿ ಬೂದಿ ನಾಗರಾಜ, ರಮೇಶ್ ಇಲ್ಲೂರು, ಅನಂತ ಜೂರಟಗಿ, ನವೀನ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಹನುಮೇಶ ಮ್ಯಾಗಳಮನಿ, ವೀರೇಶ ಯತ್ನಟ್ಟಿ ಉಪಸ್ಥಿತರಿದ್ದರು.