ಬಾಗಲಕೋಟೆ ಜಿಲ್ಲೆಯಾದ್ಯಂತ ಸೆ.22ರಿಂದ ಅಕ್ಟೋಬರ್‌ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಾದ್ಯಂತ ಸೆ.22ರಿಂದ ಅಕ್ಟೋಬರ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ವರ್ಗ, ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಅವರ ಅಭಿವೃದ್ಧಿಗಾಗಿ ಕಾರ್ಯಕ್ರಮ ರೂಪಿಸುವ ಸಲುವಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಕೈಗೊಂಡಿದೆ ಎಂದು ಹೇಳಿದರು.

ಸಮೀಕ್ಷೆ ಕಾರ್ಯಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದರೆ, ತಾಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಸಮೀಕ್ಷೆ ಕುರಿತು ಕೈಪಿಡಿಗಳನ್ನು ಮನೆ ಮನೆಗೆ ವಿತರಿಸುವ ಹಾಗೂ ಅರಿವು ಮೂಡಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಲು ಸೂಚಿಸಿದರು.

ಈಗಾಗಲೇ ಜಿಲ್ಲೆಯಿಂದ 5 ಜನ ಮಾಸ್ಟರ್ ಟ್ರೈನರ್‌ಗಳು ತರಬೇತಿ ಪಡೆದುಕೊಂಡಿದ್ದು, ಪ್ರತಿ 10 ಬ್ಲಾಕ್‌ಗಳಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಿಸಲಾಗುತ್ತಿದೆ. 50 ಸಮೀಕ್ಷೆದಾರರಿಗೆ ಒಬ್ಬ ಮಾಸ್ಟರ್‌ ಟ್ರೈನರ್ ತರಬೇತಿ ನೀಡಲು ಕ್ರಮವಹಿಸಲು ಉದ್ದೇಶಿಸಲಾಗಿದೆ. ಸಮೀಕ್ಷೆದಾರರಿಗೆ ಎರಡು ಬಾರಿ ತರಬೇತಿ ನೀಡಲಾಗುತ್ತದೆ. ತರಬೇತಿಯನ್ನು ಶೈಕ್ಷಣಿಕ ಕ್ಲಸ್ಟರ್‌ ಮಟ್ಟಗಳಲ್ಲಿ ಶಾಲಾ ಅವಧಿಯ ಬಳಿಕ ಆಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ತೇಲಿ, ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ 7688 ಶಿಕ್ಷಕರು ಹಾಗೂ ಇತರೆ ಇಲಾಖೆಯ 2126 ನೌಕರರನ್ನು ಸಹ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಪ್ರತಿ ಮನೆಗಳಿಗೆ ಯುಎಚ್ಐಡಿ ವಿವರದೊಂದಿಗೆ ಸ್ಟಿಕರ್ ಅಂಟಿಸುವ ಕಾರ್ಯ ನಡೆದಿದೆ. ಆ್ಯಪ್ ಮೂಲಕವೇ ಸಮೀಕ್ಷೆದಾರರು ಸಮೀಕ್ಷೆ ಕಾರ್ಯ ಕೈಗೊಳ್ಳುತ್ತಿದ್ದು, ಸಮೀಕ್ಷೆದಾರರು ಮನೆ ಮನೆಗೆ ಬಂದಾಗ ಅಗತ್ಯ ಮಾಹಿತಿ ನೀಡಿ ಸಹಕರಿಸಲು ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಸಮೀಕ್ಷೆ ವೇಳೆ ಆಧಾರ್‌ ಕಾರ್ಡ್‌ ಅಗತ್ಯವಾಗಿದ್ದು, ಆಧಾರ್‌ ಕಾರ್ಡ್‌ಗೆ ಜೋಡಣೆಯಾದ ಮೊಬೈಲ್ ನಂಬರ್‌ಗೆ ಓಟಿಪಿ ಬರಲಿದೆ. ಆಧಾರ್‌ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಇರದಿದ್ದರೆ ಕೂಡಲೇ ಮೊಬೈಲ್ ನಂಬರ್‌ ಲಿಂಕ್ ಮಾಡಿಸಿಕೊಳ್ಳಲು ತಿಳಿಸಿದರು.

ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಹಾಗೂ ಆಯಾ ತಾಲೂಕಿನ ತಹಸೀಲ್ದಾರರು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈರಪ್ಪ ಆಶಾಪೂರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಗೌರಮ್ಮ ಸಂಕೀನ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.