ಸಾರಾಂಶ
ಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ಜೂ.14 ರಿಂದ 22 ರವರೆಗೆ ಜಿಲ್ಲಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷಾ ಪಾವಿತ್ರತೆ ಕಾಪಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ-2ಗೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪದೋಷಗಳಿಗ ಅವಕಾಶ ನೀಡದೆ. ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿ, ಎಚ್ಚರಿಕೆಯಿಂದ ನಡೆದುಕೊಳ್ಳಬೇಕೆಂದು ತಾಕೀತು ಮಾಡಿದರು.ಪರೀಕ್ಷಾ ಕೇಂದ್ರಗಳಲ್ಲಿ ನಕಲು ಆಗದಂತೆ ಕ್ರಮವಹಿಸಬೇಕು. ಪರೀಕ್ಷಾ ನಡೆಯುವ ದಿನಗಳಂದು ಆಯಾ ತಾಲೂಕಿನ ತಹಸೀಲ್ದಾರ್ ಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ನಿಗಾವಹಿಸಬೇಕು. ಜಿಲ್ಲೆಯ 19 ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಲ್ಲಿ 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತದ, ತಾಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗುವುದು ಎಂದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದೀನ್ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜಿಲ್ಲೆಯ 19 ಕೇಂದ್ರಗಳಲ್ಲಿ ನಡೆಯಲಿದ್ದು, 6,421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್ ರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆ ನಡೆಯುವ ದಿನಗಳಂದು ನಿಯೋಜಿಸಲಾಗುವುದು. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ನೇಮಕ ಮಾಡಲಾಗಿರುವ ಮಾರ್ಗಾಧಿಕಾರಿಗಳ ವಾಹನಕ್ಕೆ ಸಶಸ್ತ್ರ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರನ್ನು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಪತ್ರ ವ್ಯವಹರಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಅಕ್ರಮ ನಡೆಯದಂತೆ 144 ಸೆಕ್ಷನ್ ಜಾರಿ ಆದೇಶ ಮಾಡುವಂತೆ ಮನವಿ ಮಾಡಿದರು.ಪರೀಕ್ಷಾ ಮಂಡಳಿಯಿಂದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಕೇಂದ್ರದಲ್ಲಿ ಉಪ ಖಜಾನೆಗಳಲ್ಲಿ ಸಂರಕ್ಷಿಸಿಡಬೇಕು. ಪರೀಕ್ಷಾ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮೆರಾಗಳ ಮೂಲಕ ಪ್ರತಿ ದಿನದ ಪರೀಕ್ಷಾ ಚಟುವಟಿಕೆಗಳನ್ನು ವೀಕ್ಷಿಸಲು ಚಿತ್ರದುರ್ಗ ಡಯಟ್‍ನಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ವೆಬ್ ಕಾಸ್ಟಿಂಗ್ ಕಾರ್ಯ ಮಾಡಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಬಿಇಒ ನಾಗಭೂಷಣ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.