ಜಿಲ್ಲೆಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ

| Published : Sep 27 2024, 01:16 AM IST

ಜಿಲ್ಲೆಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೂ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

ವಿವಿಧ ಬೇಡಿಕೆಗಳು ಈಡೇರಿಸಲು ಆಗ್ರಹ, ಅನಿರ್ಧಿಷ್ಟಾವಧಿ ಮುಷ್ಕರ,

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೂ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ಆರಂಭಿಸಿದ್ದು, ಈ ಪ್ರತಿಭಟನೆ ಶುಕ್ರವಾರವೂ ಮುಂದುವರಿಯಲಿದೆ.

ಗ್ರಾಮ ಆಡಳಿತ ಅಧಿಕಾರಿಗಳು ಸಂಯೋಜನೆ, ಇ- ಆಫೀಸ್‌, ಆಧಾರ್‌ ಸೀಡ್‌, ಲ್ಯಾಂಡ್‌ ಬೀಟ್‌, ಬಗರ್‌ ಹುಕ್ಕುಂ, ನಮೂನೆ 1-5 ರ ವೆಬ್‌ ಅಪ್ಲಿಕೇಷನ್‌, ಪೌತಿ ಆಂದೋಲನ ಆಪ್‌ ಸೇರಿದಂತೆ ಸುಮಾರು 21 ತಾಂತ್ರಿಕ ಸೇವೆಗಳು ಹಾಗೂ ಸಿ- ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿವಹಿಸುತ್ತಿರುವುದರಿಂದ ತಮಗೂ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್‌ ಮತ್ತು ಕುರ್ಚಿ ಮತ್ತು ಆಲ್ಮೆರಾ, ಗುಣಮಟ್ಟದ ಮೊಬೈಲ್‌ ಫೋನ್‌, ಗೂಗಲ್‌ ಕ್ರೋಮ್‌ ಬುಕ್‌, ಲ್ಯಾಪ್‌ ಟಾಪ್‌, ಪ್ರಿಂಟರ್‌ ಸ್ಕ್ಯಾನರ್‌ ನೀಡಬೇಕು. ಮೊಬೈಲ್‌ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಬೇಕು. ಕೆಸಿಎಸ್‌ಆರ್‌ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನ ಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕಬಾರದು. ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಆದೇಶ ಹೊರಡಿಸಬೇಕು. ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಹಾಗೂ ರಾಜಸ್ವ ನಿರೀಕ್ಷಕರ ಹುದ್ದೆಗೆ ತಕ್ಷಣವೇ ಪದೋನ್ನತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕೆಲಸದ ಅವಧಿಗೂ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್‌ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಆಹಾರ ಇಲಾಖೆ ಕೆಲಸಗಳನ್ನು ಕಂದಾಯ ಇಲಾಖೆಗೆ ನಿರ್ವಹಿಸಲು ಆದೇಶಿಸುತ್ತಿರುವುದರಿಂದ ಈ ಹಿಂದಿನಂತೆ ಆಹಾರ ಇಲಾಖೆ ಆಹಾರ ನಿರೀಕ್ಷಕರ ಹುದ್ದೆಗೆ ಪದೋನ್ನತಿ ನೀಡಬೇಕು. ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್‌ ಜಿಲ್ಲಾ ವರ್ಗಾವಣೆಗೆ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇತರೆ ಎಲ್ಲಾ ರೀತಿ ಕೆಲಸ ನಿರ್ವಹಿಸುತ್ತಿರುವ ತಮಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಯಲ್ಲಿರುವಂತೆ 3 ಸಾವಿರ ರು. ಆಪತ್ತಿನ ಭತ್ಯೆ ನೀಡಬೇಕು. ಪ್ರಯಾಣ ಭತ್ಯೆಯನ್ನು 500 ರು.ಗಳಿಂದ 3 ಸಾವಿರಕ್ಕೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮಾಜಿ ಜಿಲ್ಲಾಧ್ಯಕ್ಷ ನಾಗೇಶ್‌, ತಾಲೂಕು ಅಧ್ಯಕ್ಷ ಚೇತನ್‌, ಪ್ರಧಾನ ಕಾರ್ಯದರ್ಶಿ ತೇಜಶ್ವರ್‌, ಉಪಾಧ್ಯಕ್ಷೆ ಈರಮ್ಮ, ಹರ್ಷವರ್ಧನ್‌, ಪ್ರದೀಪ್‌, ಯಮುನಾ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಪಾಲ್ಗೊಂಡಿದ್ದರು.

26 ಕೆಸಿಕೆಎಂ 1ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಚಿಕ್ಕಮಗಳೂರು ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.